ಕೆಪಿಎಸ್ಸಿ ಸುಧಾರಣೆಗೆ ಸದನ ಸಮಿತಿ ವರದಿ ಸಿದ್ಧ; ಐದು ದಿನಗಳಲ್ಲಿ ಸಲ್ಲಿಕೆ ಸಾಧ್ಯತೆ
ಬೆಂಗಳೂರು, 16 ನವೆಂಬರ್ (ಹಿ.ಸ.): ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಿಸುವ ನಿಟ್ಟಿನಲ್ಲಿ ರಚಿಸಲಾಗಿದ್ದ ಸದನ ಸಮಿತಿಯ ವರದಿ ಅಂತಿಮಗೊಂಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂ
KPSC-Reforms-Panel-Report-Ready-Submission-Expected-Within-Five-Days


ಬೆಂಗಳೂರು, 16 ನವೆಂಬರ್ (ಹಿ.ಸ.):

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಹೆಚ್ಚಿಸುವ ನಿಟ್ಟಿನಲ್ಲಿ ರಚಿಸಲಾಗಿದ್ದ ಸದನ ಸಮಿತಿಯ ವರದಿ ಅಂತಿಮಗೊಂಡಿದೆ.

ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ 11 ಸದಸ್ಯರ ಸಮಿತಿಯು ಸಿದ್ಧಪಡಿಸಿರುವ ವರದಿಯನ್ನು ಮುಂದಿನ ಐದು ದಿನಗಳೊಳಗೆ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಅವರಿಗೆ ಸಲ್ಲಿಸುವ ಸಾಧ್ಯತೆಯಿದೆ.

ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೂ ಮುನ್ನ ಅವರ ವೈಯಕ್ತಿಕ ಹಾಗೂ ವೃತ್ತಿಪರ ಹಿನ್ನೆಲೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂಬುದು ಸಮಿತಿಯ ಪ್ರಮುಖ ಶಿಫಾರಸುಗಳಲ್ಲಿ ಒಂದಾಗಿದೆ. ರಾಜಕೀಯ, ಜಾತಿ ಅಥವಾ ವೈಯಕ್ತಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡದೆ, ಅರ್ಹತೆ ಮತ್ತು ಪ್ರಾಮಾಣಿಕತೆಯ ಆಧಾರದ ಮೇಲೆ ನೇಮಕಾತಿ ನಡೆಯಬೇಕು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಈ ಕುರಿತು ಸಮಿತಿ ಮೂಲಗಳು ಮಾಹಿತಿ ನೀಡಿದ್ದು, ನಮಗೆ ಬೇಕಾದವರು, ನಮ್ಮ ಪಕ್ಷದವರು ಅಥವಾ ನಮ್ಮ ಜಾತಿಯವರು ಹುದ್ದೆಯಲ್ಲಿರಬೇಕು ಎಂಬ ಮನೋಭಾವ ಇರಬಾರದು. ಪ್ರತಿಯೊಬ್ಬ ಅಭ್ಯರ್ಥಿಯ ಹಿನ್ನೆಲೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು.

ಅವರ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ. ಉತ್ತಮ ಆಡಳಿತದ ದೃಷ್ಟಿಯಿಂದ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಸಿದ್ಧತೆ, ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಶಿಸ್ತು, ನೇಮಕಾತಿ ಪ್ರಕ್ರಿಯೆಯಲ್ಲಿನ ಹೊಣೆಗಾರಿಕೆ ಹೆಚ್ಚಿಸುವುದು ಸೇರಿದಂತೆ ಹಲವು ಮಹತ್ವದ ಸುಧಾರಣೆಗಳನ್ನು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ಕೆಪಿಎಸ್ಸಿಯೂ ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಪ್ರಕಟಿಸಬೇಕು ಎಂಬ ಸಲಹೆಯನ್ನೂ ನೀಡಲಾಗಿದೆ.

ಪ್ರತಿ ವರ್ಷ ಯಾವ ತಿಂಗಳಲ್ಲಿ ಪರೀಕ್ಷೆ ನಡೆಸಬೇಕು, ಮೌಲ್ಯಮಾಪನ ಯಾವಾಗ ಪೂರ್ಣಗೊಳಿಸಬೇಕು ಹಾಗೂ ಸಂದರ್ಶನಗಳನ್ನು ಯಾವ ಅವಧಿಯಲ್ಲಿ ನಡೆಸಬೇಕು ಎಂಬುದನ್ನು ಮೊದಲೇ ನಿಗದಿಪಡಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಇದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬವನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂಬ ನಿರೀಕ್ಷೆಯಿದೆ.

ಅಲ್ಲದೆ, ಕೆಪಿಎಸ್ಸಿ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರ, ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟಪಡಿಸುವುದು, ಪ್ರಶ್ನೆ ಪತ್ರಿಕೆ ತಯಾರಿಕೆ ಮತ್ತು ಮುದ್ರಣದ ಹಂತದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಅಳವಡಿಸುವುದು ಹಾಗೂ ಸೋರಿಕೆ ತಡೆಯಲು ಪರಿಣಾಮಕಾರಿ ವ್ಯವಸ್ಥೆ ರೂಪಿಸುವುದಕ್ಕೂ ಒತ್ತು ನೀಡಲಾಗಿದೆ.

ಈ ವರ್ಷದ ಆರಂಭದಲ್ಲಿ ಕೆಪಿಎಸ್ಸಿಯಲ್ಲಿನ ಅಕ್ರಮಗಳನ್ನು ತಡೆಯಲು ಮತ್ತು ಆಯೋಗದ ಕಾರ್ಯವೈಖರಿಯಲ್ಲಿ ಸುಧಾರಣೆ ತರಲು ವಿಧಾನಸಭೆಯು ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ 11 ಸದಸ್ಯರ ಸದನ ಸಮಿತಿಯನ್ನು ರಚಿಸಿತ್ತು.

ಸಮಿತಿಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಸೇರಿದಂತೆ ಮಾಜಿ ಸಚಿವರಾದ ಎಸ್. ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ ಮತ್ತಿತರರು ಇದ್ದರು.

ಸಮಿತಿಯು ಮಾಜಿ ಮುಖ್ಯ ಕಾರ್ಯದರ್ಶಿಗಳು, ನಿವೃತ್ತ ಅಧಿಕಾರಿಗಳು ಹಾಗೂ ಕೆಪಿಎಸ್ಸಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಮಾಲೋಚನೆ ನಡೆಸಿತ್ತು. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಅನುಸರಿಸಲಾಗುತ್ತಿರುವ ಉತ್ತಮ ಪದ್ಧತಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿತ್ತು. ಹಲವು ಸುತ್ತಿನ ಸಭೆಗಳ ಬಳಿಕ ಇದೀಗ ವರದಿಯನ್ನು ಅಂತಿಮಗೊಳಿಸಲಾಗಿದೆ.

ಇದೇ ವೇಳೆ, ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯ ಮೇಲಿನ ಅಭ್ಯರ್ಥಿಗಳ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವೂ ಪರೀಕ್ಷಾ ಭದ್ರತೆಯನ್ನು ಬಿಗಿಗೊಳಿಸಿದೆ. 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ಜಾಮರ್ಗಳ ಅಳವಡಿಕೆ ಹಾಗೂ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande