
ಮಂಡ್ಯ, 16 ನವೆಂಬರ್ (ಹಿ.ಸ.):
ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕ್ಲಸ್ಟರ್ ಕಿಚನ್ ವ್ಯವಸ್ಥೆಯಡಿ ತರಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಬಿಸಿಯೂಟ ತಯಾರಕರು ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಸಿಯೂಟ ನೌಕರರು ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ಮೂಲಕ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕಳೆದ 25 ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅಡುಗೆ ತಯಾರಿಸಿ ಊಟ ನೀಡುತ್ತಿರುವ ಮಹಿಳಾ ಕಾರ್ಮಿಕರ ಉದ್ಯೋಗಕ್ಕೆ ಯಾವುದೇ ಭದ್ರತೆ ಇಲ್ಲದಂತಾಗುತ್ತದೆ.
ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ಕೈಬಿಟ್ಟು, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೇ ಬಿಸಿಯೂಟ ತಯಾರಿಸುವ ಜವಾಬ್ದಾರಿಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ. ಕುಮಾರಿ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಯಾಗಿದೆ.
ಆದರೆ, ಈಗಿನ ಸರ್ಕಾರ ಕ್ಲಸ್ಟರ್ ಕಿಚನ್ ಹೆಸರಿನಲ್ಲಿ ಯೋಜನೆಯನ್ನು ಖಾಸಗಿಯವರ ಕೈಗೆ ಒಪ್ಪಿಸಲು ಮುಂದಾಗಿದೆ. ಇದರಿಂದ ಸಾವಿರಾರು ಮಹಿಳಾ ಕಾರ್ಮಿಕರ ಉದ್ಯೋಗಕ್ಕೆ ಕುತ್ತು ಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳಿಗೆ ಶಾಲೆಗಳಲ್ಲಿಯೇ ಬಿಸಿಯೂಟ ಸಿದ್ಧಪಡಿಸಿ ನೀಡುವ ವ್ಯವಸ್ಥೆಯನ್ನು ಮುಂದುವರಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ಖಾಸಗೀಕರಣಗೊಳಿಸುವ ನೀತಿಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷೆ ಮಹಾದೇವಮ್ಮ ಮಾತನಾಡಿ, ಬಿಸಿಯೂಟ ನೌಕರರು ಹಲವು ವರ್ಷಗಳಿಂದ ಅಲ್ಪ ವೇತನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ಲಸ್ಟರ್ ಕಿಚನ್ ವ್ಯವಸ್ಥೆಯಿಂದ ಅವರ ಬದುಕು ಬೀದಿಗೆ ಬೀಳಲಿದೆ. ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸುವುದರ ಜೊತೆಗೆ ಅಡುಗೆ ಸಿಬ್ಬಂದಿಯ ಉದ್ಯೋಗವನ್ನೂ ರಕ್ಷಿಸಬೇಕು. ಮಕ್ಕಳ ಅನ್ನ ಕಸಿದುಕೊಳ್ಳುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ಸಿ. ಕುಮಾರಿ, ಜಿಲ್ಲಾಧ್ಯಕ್ಷೆ ಮಹಾದೇವಮ್ಮ ಸೇರಿದಂತೆ ವಿವಿಧ ಶಾಲೆಗಳ ಬಿಸಿಯೂಟ ನೌಕರರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R