
ಗದಗ, 16 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಇಲ್ಲದೆ ಸಭೆಗೆ ಹಾಜರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅಧಿಕಾರಿಗಳ ಕಾರ್ಯವೈಖರಿಯನ್ನು ಖಾರವಾಗಿ ಪ್ರಶ್ನಿಸಿದರು.
ಗದಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕಾಮಗಾರಿಗಳ ಸಂಪೂರ್ಣ ವಿವರಗಳಿಲ್ಲದೆ ಸಭೆಗೆ ಹಾಜರಾಗಿದ್ದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ನಾಯ್ಕ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಮಟ್ಟದ ಜವಾಬ್ದಾರಿಯುತ ಅಧಿಕಾರಿಯಾಗಿ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಮಾಹಿತಿ ಹೊಂದಿರದಿದ್ದರೆ ಹೇಗೆ? ಕಾಮಗಾರಿಗಳ ಸ್ಥಿತಿಗತಿ, ಪ್ರಗತಿ, ವೆಚ್ಚ ಹಾಗೂ ಅನುದಾನದ ಬಳಕೆಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಸಭೆಗೆ ಬರುವುದಾದರೂ ಏಕೆ? ಮಾಹಿತಿ ಕೊರತೆಯಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಲು ಮುಂದಾಗಿದ್ದೀರಾ ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.
ಇದಕ್ಕೂ ಮಿಗಿಲಾಗಿ, ಗದಗ ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಪರಿಶೀಲನೆಗೆ ಸಂಬಂಧಿಸಿದಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಜರಾಗಬೇಕಿದ್ದರೂ, ಅವರ ಬದಲಿಗೆ ಕಿರಿಯ ಎಂಜಿನಿಯರ್ಗಳನ್ನು (ಜೆಇ) ಸಭೆಗೆ ಕಳುಹಿಸಿರುವುದಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕು ಮಟ್ಟದ ಜವಾಬ್ದಾರಿಯುತ ಅಧಿಕಾರಿಗಳು ಸಭೆಗೆ ಹಾಜರಾಗದಿರಲು ಕಾರಣವೇನು? ಮಹತ್ವದ ಪ್ರಗತಿ ಪರಿಶೀಲನಾ ಸಭೆಯನ್ನು ಪಿಡಬ್ಲೂಡಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದಿರುವುದೇಕೆ ಎಂದು ಪ್ರಶ್ನಿಸಿದರು.
ಅಧಿಕಾರಿಗಳಿಂದ ಸಮರ್ಪಕ ಉತ್ತರ ದೊರೆಯದೆ, ಕಾಮಗಾರಿಗಳ ಕುರಿತು ಅಗತ್ಯ ಮಾಹಿತಿ ಇಲ್ಲ ಎಂಬ ಉತ್ತರ ಬಂದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಚಿವರು, ತಕ್ಷಣವೇ ರಾಜ್ಯ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿ ಇಲಾಖೆಯ ಅಧಿಕಾರಿಗಳ ಕಾರ್ಯನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕರ್ತವ್ಯ ನಿರ್ಲಕ್ಷ್ಯ ಹಾಗೂ ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗದ ಪಿಡಬ್ಲೂಡಿ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಗೆ ಸಂಪೂರ್ಣ ವರದಿಗೆ ಸೂಚನೆ
ಇದೇ ಸಂದರ್ಭದಲ್ಲಿ ಪಿಡಬ್ಲೂಡಿ ಇಲಾಖೆ ಸೆರಿದಂತೆ ಕೆಆರ್ಐಡಿಎಲ್, ಕರ್ನಾಟಕ ಗೃಹ ಮಂಡಳಿ, ನಿರ್ಮಿತಿ ಕೇಂದ್ರ ಹಾಗೂ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ವೈ) ಸೇರಿದಂತೆ ವಿವಿಧ ಸಂಸ್ಥೆಗಳ ಕಾಮಗಾರಿಗಳ ಪ್ರಗತಿಯನ್ನೂ ಸಚಿವರು ಪರಿಶೀಲಿಸಿದರು. ಕೆಲವು ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಿದ್ದರೂ, ಕಾಮಗಾರಿಗಳ ಅನುಷ್ಠಾನ ಮತ್ತು ಅನುದಾನದ ಬಳಕೆಯ ಕುರಿತು ಇನ್ನಷ್ಟು ಸ್ಪಷ್ಟತೆ ನೀಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ, ಕಾಮಗಾರಿವಾರು ನಿಗದಿಪಡಿಸಿದ ಅನುದಾನ, ಇದುವರೆಗೆ ವೆಚ್ಚ ಮಾಡಿರುವ ಮೊತ್ತ, ಉಳಿಕೆ ಅನುದಾನ ಮತ್ತು ಕಾಮಗಾರಿಗಳ ಪೂರ್ಣಗೊಳಿಸುವಿಕೆಗೆ ಅಗತ್ಯವಿರುವ ಹೆಚ್ಚುವರಿ ಅನುದಾನದ ಕುರಿತು ಸಮಗ್ರ ವರದಿ ಸಿದ್ಧಪಡಿಸಬೇಕು. ಯಾವುದೇ ಅಸ್ಪಷ್ಟತೆ ಅಥವಾ ಮಾಹಿತಿ ಕೊರತೆಗೆ ಅವಕಾಶ ನೀಡದೆ, ಎಲ್ಲ ವಿವರಗಳನ್ನು ಮರುದಿನ ನಡೆಯುವ ಪ್ರಗತಿ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಸಾರ್ವಜನಿಕರ ತೆರಿಗೆ ಹಣದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ, ಕಾಲಮಿತಿ ಹಾಗೂ ಪ್ರಗತಿಯ ಬಗ್ಗೆ ಅಧಿಕಾರಿಗಳು ಸಂಪೂರ್ಣ ಹೊಣೆಗಾರಿಕೆ ವಹಿಸಬೇಕು. ಸಭೆಗೆ ಬರುವ ಮುನ್ನವೇ ತಮ್ಮ ಇಲಾಖೆಯ ಎಲ್ಲ ಮಾಹಿತಿಯನ್ನು ಸಿದ್ಧಪಡಿಸಿಕೊಂಡು ಬರಬೇಕು ಎಂಬ ಸ್ಪಷ್ಟ ಸಂದೇಶವನ್ನು ಸಚಿವ ಬಸವರಾಜ ರಾಯರಡ್ಡಿ ನೀಡಿದರು.
ಅರಣ್ಯ ಇಲಾಖೆ
ಅರಣ್ಯ ಇಲಾಖೆಗೆ ಪ್ರತಿ ವರ್ಷ ಅನುದಾನ ಬರುತ್ತದೆ ಮತ್ತು ಅನುದಾನದಿಂದ ಜಿಲ್ಲಾದ್ಯಂತ ಮರಗಳನ್ನು ನೆಡಲಾಗುತ್ತದೆ , ಹೀಗೆ ಇಲಾಖೆ ಸರಿಯಾಗಿ ಕೆಲಸ ಮಾಡಿದ್ದರೇ, ಇಂದಿಗೆ ಜಿಲ್ಲೆಯಲ್ಲಿ ಯಾವುದೇ ಪ್ರದೇಶ ಖಾಲಿ ಇರುತ್ತಿರುತ್ತಿಲ್ಲ ಇದು ಕೇವಲ ಗದಗ ಜಿಲ್ಲೆಯ ಸಮಸ್ಯೆಯಾಗದೇ ಇಡೀ ರಾಜ್ಯದ್ದಾಗಿದೆ, ಹಾಗಾಗಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಎಷ್ಟುಮರಗಳನ್ನು ನೆಡಲಾಗಿದೆ ಎನ್ನುವ ಮಾಹಿತಿಯನ್ನು ನೀಡಬೇಕು, ಅವುಗಳನ್ನು ಒಂದು ದಿನ ಪರಿಶೀಲನೆ ನಡೆಸುತ್ತೇನೆ ಎಂದು ಸಚಿವ ರಾಯರಡ್ಡಿ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಹೆಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP