
ಗದಗ, 16 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಪ್ರಗತಿ ಸಾಧನೆಗೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇಲಾಖೆಗೆ ದೊರೆತ ಅವಕಾಶವನ್ನು ಸಾರ್ಥಕಗೊಳಿಸುವುದರ ಜತೆಗೆ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಸಚಿವ ಬಸವರಾಜ ರಾಯರಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ನಿರಂತರವಾಗಿ ನಡೆಯಲಿರುವ ಸಭೆಯಲ್ಲಿ ಮೊದಲ ಹಂತವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಕರ್ನಾಟಕ ಬೀಜ ನಿಗಮದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲಾಯಿತು.
ಪ್ರತಿಯೊಂದು ಇಲಾಖೆಯಲ್ಲಿನ ಮಂಜೂರಾದ ಹುದ್ದೆಗಳು, ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಖಾಲಿ ಹುದ್ದೆಗಳು, ಹೊರಗುತ್ತಿಗೆ ನೌಕರರ ಸಂಖ್ಯೆ, ವೇತನಕ್ಕೆ ಅಗತ್ಯವಿರುವ ಅನುದಾನ, ಯೋಜನೆಗಳ ಅನುಷ್ಠಾನ, ಇಲಾಖೆಯ ಪ್ರಗತಿ, ವಿಶೇಷ ಸಾಧನೆ ಹಾಗೂ ಕುಂದುಕೊರತೆಗಳ ಕುರಿತು ಅಧಿಕಾರಿಗಳು ಸ್ಪಷ್ಟ ಮತ್ತು ಸಮಗ್ರ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ಅನಗತ್ಯ ವಿಷಯಗಳ ಚರ್ಚೆಗೆ ಅವಕಾಶ ನೀಡದೆ, ಇಲಾಖೆಗೆ ಸಂಬಂಧಿಸಿದ ವಿಷಯಗಳನ್ನೇ ಸ್ಪಷ್ಟವಾಗಿ ಮಂಡಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಿ ನಿಗದಿತ ಗುರಿ ಸಾಧಿಸಬೇಕು. ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಇಲಾಖೆಯ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಕೃಷಿ ಪ್ರಗತಿಗೆ ₹23.29 ಕೋಟಿ
ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ ಒಟ್ಟು 204 ಹುದ್ದೆಗಳು ಮಂಜೂರಾಗಿದ್ದು, 83 ಹುದ್ದೆಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 53 ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಸಿಬ್ಬಂದಿ ವೇತನಕ್ಕಾಗಿ ₹8.93 ಕೋಟಿ ಹಾಗೂ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕಾಗಿ ₹1.19 ಕೋಟಿ ವೆಚ್ಚವಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಮಾಹಿತಿ ಪಡೆದ ಸಚಿವರು, ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು. ಇಲಾಖೆಯ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಜಿಲ್ಲೆಗೆ ಅಂದಾಜು ₹23.29 ಕೋಟಿ ಅನುದಾನ ಒದಗಿಸಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು. ಮುಂದಿನ ಸಾಲಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಲಭ್ಯತೆ ಮತ್ತು ಬೇಡಿಕೆ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಿದರು.
ಬರ ಪರಿಹಾರಕ್ಕೆ ವಿಶೇಷ ಗಮನ
ತೋಟಗಾರಿಕೆ ಇಲಾಖೆಯಲ್ಲಿ 72 ಹುದ್ದೆಗಳು ಮಂಜೂರಾಗಿದ್ದು, 60 ಹುದ್ದೆಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಬ್ಬಂದಿ ವೇತನಕ್ಕಾಗಿ ₹6.95 ಕೋಟಿ ಅಗತ್ಯವಿದೆ. ಹೊರಗುತ್ತಿಗೆ ಆಧಾರದ ಮೇಲೆ ಮೂವರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಅವರ ವೇತನಕ್ಕಾಗಿ ₹7.59 ಲಕ್ಷ ಪಾವತಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇಲಾಖೆಯ ವಿವಿಧ ಯೋಜನೆಗಳಿಗೆ ಅಂದಾಜು ₹14 ಕೋಟಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ರೈತರಿಗೆ ಸಹಾಯಧನದ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದ್ದು, ಈರುಳ್ಳಿ ಸಂಗ್ರಹಣಾ ಘಟಕಗಳ ಸ್ಥಾಪನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದ ಸಚಿವರು, ಪ್ರಸಕ್ತ ಸಾಲಿನಲ್ಲಿ 7.19 ಲಕ್ಷ ಎಕರೆ ಬಿತ್ತನೆ ಪ್ರದೇಶವಿದ್ದು, 7.01 ಲಕ್ಷ ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.38ರಷ್ಟು ಕಡಿಮೆ ಮಳೆಯಾಗಿದೆ. ಬರದಿಂದ ಉಂಟಾದ ಹಾನಿಯ ಅಂದಾಜು ಮೊತ್ತ ₹262 ಕೋಟಿ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಪ್ರತಿ ಹೆಕ್ಟೇರ್ಗೆ ₹8,500 ಪರಿಹಾರ ನೀಡಬೇಕಿದ್ದು, ರಾಜ್ಯ ಸರ್ಕಾರದಿಂದ ರೈತರಿಗೆ ₹5,000 ಪರಿಹಾರ ಘೋಷಿಸಲಾಗಿದೆ. ಉಳಿದ ₹3,500 ಪರಿಹಾರ ಒದಗಿಸುವ ಕುರಿತು ಕ್ರಮವಹಿಸಬೇಕು ಎಂಬ ವಿಷಯ ಸಭೆಯಲ್ಲಿ ಚರ್ಚೆಯಾಯಿತು.
ಡಂಬಳ ತೋಟಗಾರಿಕೆ ಕಾಲೇಜಿನ ಪ್ರಗತಿ ಕುರಿತು ಸಮಗ್ರ ಮಾಹಿತಿ ಪಡೆದು ಮುಂದಿನ ಸಭೆಗೆ ವರದಿ ಸಲ್ಲಿಸುವಂತೆಯೂ ಸಚಿವರು ಸೂಚಿಸಿದರು.
ರೇಷ್ಮೆ, ಪಶುಸಂಗೋಪನೆ ಇಲಾಖೆಗೆ ಎಚ್ಚರಿಕೆ
ರೇಷ್ಮೆ ಇಲಾಖೆಯಲ್ಲಿ ಮಂಜೂರಾದ 49 ಹುದ್ದೆಗಳ ಪೈಕಿ 41 ಹುದ್ದೆಗಳು ಖಾಲಿಯಿದ್ದು, ಕೇವಲ 8 ಹುದ್ದೆಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಆದರೆ, ಇಲಾಖೆಯ ಪ್ರಗತಿ ಹಾಗೂ ಸಿಬ್ಬಂದಿ ಕುರಿತಂತೆ ಸಮರ್ಪಕ ಮಾಹಿತಿ ನೀಡುವಲ್ಲಿ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ತಮ್ಮ ಇಲಾಖೆಯ ಕುರಿತು ಸ್ಪಷ್ಟ ಮಾಹಿತಿ ಹೊಂದಿರಬೇಕು. ಸಭೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಲು ಸಾಧ್ಯವಾಗದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೇಷ್ಮೆ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್ ಅವರಿಗೆ ಸೂಚಿಸಿದರು.
ಪಶುಸಂಗೋಪನೆ ಇಲಾಖೆಯಲ್ಲಿ 384 ಹುದ್ದೆಗಳು ಮಂಜೂರಾಗಿದ್ದು, 106 ಹುದ್ದೆಗಳಲ್ಲಿ ಮಾತ್ರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 278 ಹುದ್ದೆಗಳು ಖಾಲಿಯಿವೆ. ಸಿಬ್ಬಂದಿ ವೇತನಕ್ಕಾಗಿ ₹12.12 ಕೋಟಿ ಅನುದಾನದ ಅಗತ್ಯವಿದೆ. ಅಲ್ಲದೆ, 87 ಹೊರಗುತ್ತಿಗೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇಲಾಖೆಗೆ ಐದು ಸಂಚಾರಿ ಪಶುವೈದ್ಯಕೀಯ ವಾಹನಗಳ ಅವಶ್ಯಕತೆಯಿದ್ದು, ಒಟ್ಟು ಅಂದಾಜು ₹12 ಕೋಟಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಇಲಾಖೆಯ ಪ್ರಗತಿ ಸಮಾಧಾನಕರವಾಗಿಲ್ಲ ಎಂದು ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ಸಮರ್ಪಕ ಮಾಹಿತಿ ನೀಡದ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರಿಗೆ ಎಚ್ಚರಿಕೆ ನೋಟಿಸ್ ನೀಡುವಂತೆ ಸೂಚಿಸಿದರು.
ಜಿಲ್ಲೆಯ ಪಾಲಿಕ್ಲಿನಿಕ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಕಾರ್ಯನಿರ್ವಹಣೆ ಪರಿಶೀಲಿಸುವುದಾಗಿಯೂ ತಿಳಿಸಿದರು.
ಹಮ್ಮಿಗಿ ಜಲಾಶಯದಲ್ಲಿ ಮೀನುಗಾರಿಕೆ ಫಾರ್ಮ್ ಸ್ಥಾಪನೆಗೆ ಸೂಚನೆ
ಮೀನುಗಾರಿಕೆ ಇಲಾಖೆಯಲ್ಲಿ 12 ಹುದ್ದೆಗಳು ಮಂಜೂರಾಗಿರುವ ಕುರಿತು ಮಾಹಿತಿ ಪಡೆದ ಸಚಿವರು, ಉಚಿತ ಮೀನುಮರಿ ವಿತರಣೆ ಸೇರಿದಂತೆ ಮೀನುಗಾರರಿಗೆ ಪ್ರೋತ್ಸಾಹ ನೀಡುವ ಯೋಜನೆಗಳ ಅನುಷ್ಠಾನ ಪರಿಶೀಲಿಸಿದರು. ಪರಿಶಿಷ್ಟ ಜಾತಿಯ ಮೀನುಗಾರರಿಗೆ ತಲಾ ₹50 ಸಾವಿರ ಮೌಲ್ಯದ ಮೀನುಗಾರಿಕೆ ಸಲಕರಣೆಗಳನ್ನು ವಿತರಿಸುವ ಯೋಜನೆಯ ಕುರಿತು ಮಾಹಿತಿ ಪಡೆದರು.
ಮುನಿರಾಬಾದ್ ಜಲಾಶಯದ ಮಾದರಿಯಲ್ಲಿ ಹಮ್ಮಿಗಿ ಜಲಾಶಯದಲ್ಲಿಯೂ ಮೀನುಗಾರಿಕೆ ಫಾರ್ಮ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ಮೀನುಗಾರರಿಗೆ ಉದ್ಯೋಗ ಮತ್ತು ಆದಾಯದ ಅವಕಾಶಗಳು ಹೆಚ್ಚಾಗಲಿವೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ಬೀಜ ನಿಗಮದ ವಿವಿಧ ಯೋಜನೆಗಳು ಹಾಗೂ ಅವುಗಳ ಅನುಷ್ಠಾನ ಕಾರ್ಯವಿಧಾನದ ಕುರಿತು ಸಚಿವರು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಚೆಕ್ಡ್ಯಾಂ ನಿರ್ಮಾಣಕ್ಕೆ ಭವಿಷ್ಯದ ನಕ್ಷೆ ರೂಪಿಸಿ
ನೀರಾವರಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ರಾಯರಡ್ಡಿ ಅವರು, ಜಿಲ್ಲೆಯಲ್ಲಿ ಹಳ್ಳಗಳ ಸಂಖ್ಯೆ ಹೆಚ್ಚಿರುವುದರಿಂದ ಮಳೆನೀರನ್ನು ಸಂಗ್ರಹಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಚೆಕ್ಡ್ಯಾಂ ನಿರ್ಮಾಣಕ್ಕೆ ಭವಿಷ್ಯದ ನಕ್ಷೆ ರೂಪಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಬಿಜೆಎನ್ಎಲ್, ಕೃಷ್ಣಾ ಭಾಗ್ಯ ಜಲ ನಿಗಮ, ಸಿಂಗಟಾಲೂರ ಏತ ನೀರಾವರಿ ಯೋಜನೆ ಹಾಗೂ ಎಂಆರ್ಬಿಸಿ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಎಂಆರ್ಬಿಸಿ ವ್ಯಾಪ್ತಿಯ ಒಟ್ಟು 9 ಕಾಮಗಾರಿಗಳ ಪೈಕಿ 3 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ 6 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ₹462.35 ಕೋಟಿ ಮಂಜೂರಾಗಿದ್ದು, ಈವರೆಗೆ ₹419.26 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹನಿ ನೀರಾವರಿ ಪದ್ಧತಿಯ ಮೂಲಕ ಎಷ್ಟು ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂಬುದರ ಕುರಿತು ಸಮಗ್ರ ಮಾಹಿತಿ ಒಳಗೊಂಡ ನಕ್ಷೆ ಸಿದ್ಧಪಡಿಸಬೇಕು. ಯೋಜನೆಯಿಂದ ರೈತರಿಗೆ ದೊರೆಯುವ ಪ್ರಯೋಜನ ಹಾಗೂ ನೀರಾವರಿ ವ್ಯಾಪ್ತಿಯ ವಿವರಗಳನ್ನು ಸ್ಪಷ್ಟಪಡಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಹೆಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP