
ಬೆಂಗಳೂರು, 16 ನವೆಂಬರ್ (ಹಿ.ಸ.):
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ವಿವಿಧ ಪ್ರದೇಶಗಳ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಬೆಳಿಗ್ಗೆ ರಾಜರಾಜೇಶ್ವರಿನಗರ ವಿಭಾಗದ ವಿನಾಯಕ ಬಡಾವಣೆ ವಾರ್ಡ್-25 ಹಾಗೂ ಕೆಂಗೇರಿ ವಿಭಾಗದ ಹೆರೋಹಳ್ಳಿ ವಾರ್ಡ್-72ರ ವ್ಯಾಪ್ತಿಯ ತ್ಯಾಜ್ಯ ಸಂಗ್ರಹಣಾ ವಾಹನಗಳ ತ್ಯಾಜ್ಯ ತುಂಬುವ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆ, ಕಾರ್ಯನಿರ್ವಹಣೆ ಮತ್ತು ಸ್ವಚ್ಛತಾ ಕ್ರಮಗಳನ್ನು ಪರಿಶೀಲಿಸಿದರು.
ಪಾಲಿಕೆಯ ಎಲ್ಲ ವಾರ್ಡ್ಗಳಲ್ಲಿಯೂ ವ್ಯವಸ್ಥಿತ ಹಾಗೂ ಪರಿಣಾಮಕಾರಿ ಘನತ್ಯಾಜ್ಯ ನಿರ್ವಹಣೆಗಾಗಿ ಸಮಗ್ರ ಸೂಕ್ಷ್ಮ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರೂಪಿಸಿದ ಯೋಜನೆಯ ಪ್ರಕಾರ ತ್ಯಾಜ್ಯ ನಿರ್ವಹಣಾ ಕಾರ್ಯಗಳನ್ನು ಇನ್ನಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಘನತ್ಯಾಜ್ಯ ನಿರ್ವಹಣೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಎಸ್.ವಿ. ಮಳಗಾವಿ, ರಾಜರಾಜೇಶ್ವರಿನಗರ ಮತ್ತು ಕೆಂಗೇರಿ ವಿಭಾಗಗಳ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಮಾರ್ಷಲ್ ಮೇಲ್ವಿಚಾರಕರು ಹಾಗೂ ಮಾರ್ಷಲ್ಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.