
ಬೆಂಗಳೂರು, 17 ನವೆಂಬರ್ (ಹಿ.ಸ.):
ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭವಾಗಿದೆ.
ಪ್ರತಿಭಟನೆಯ ಮೊದಲ ದಿನ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು 20 ಸಾವಿರ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದು, ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಎಚ್ಚರಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಜನವರಿಯಲ್ಲಿ ಸರ್ಕಾರ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಒತ್ತಾಯಿಸಲು ಮತ್ತೆ ಹೋರಾಟಕ್ಕೆ ಇಳಿದಿದ್ದೇವೆ. ಗ್ಯಾರಂಟಿಗಳ ಹೆಸರಿನಲ್ಲಿ ದುಡಿಯುವ ಮಹಿಳೆಯರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ನೀಡದೆ ಸರ್ಕಾರ ಜಾರಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದರು.
ಕಳೆದ 17 ವರ್ಷಗಳಿಂದ ಗ್ರಾಮೀಣ ಪ್ರದೇಶ ಹಾಗೂ ನಗರಗಳ ಕೊಳಗೇರಿಗಳಲ್ಲಿ ಮನೆಮನೆಗೆ ತೆರಳಿ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರಿಗೆ ಕಾರ್ಮಿಕರ ಮಾನ್ಯತೆ ಹಾಗೂ ಘನತೆಯಿಂದ ಬದುಕಲು ಅಗತ್ಯವಾದ ಕನಿಷ್ಠ ವೇತನ ನೀಡದೆ ಅಲ್ಪ ಪ್ರೋತ್ಸಾಹಧನದಲ್ಲಿ ದುಡಿಸಿಕೊಳ್ಳುತ್ತಿವೆ ಎಂದು ಸಂಘ ಆರೋಪಿಸಿದೆ.
ಕಳೆದ ವರ್ಷ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹಾಗೂ ಸರ್ಕಾರ ಮಾಸಿಕ ಕನಿಷ್ಠ ₹10 ಸಾವಿರ ಗೌರವಧನ ಖಾತರಿಪಡಿಸುವುದಾಗಿ ಭರವಸೆ ನೀಡಿದ್ದರೂ ಅದನ್ನು ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಎಂಟು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಆರಂಭಿಸಲಾಗಿದೆ ಎಂದು ತಿಳಿಸಿದೆ.
ಸಂಘದ ಪ್ರಮುಖ ಬೇಡಿಕೆಗಳು
* ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡಬೇಕು.
* ಬಲವಂತದ ಮೊಬೈಲ್ ಆ್ಯಪ್ ಕೆಲಸ ಕೈಬಿಡಬೇಕು ಅಥವಾ ಮೊಬೈಲ್ ಸೌಲಭ್ಯ ಹಾಗೂ ಪ್ರತ್ಯೇಕ ಪ್ರೋತ್ಸಾಹಧನ ಒದಗಿಸಬೇಕು.
* ನಿವೃತ್ತರಾದ ಕಾರ್ಯಕರ್ತೆಯರಿಗೆ ಬಾಕಿ ಇರುವ ಇಡಿಗಂಟು ಬಿಡುಗಡೆ ಮಾಡಬೇಕು.
* ಬಾಕಿ ಇರುವ ಎಲ್ಲ ಪ್ರೋತ್ಸಾಹಧನವನ್ನು ಕೂಡಲೇ ಪಾವತಿಸಬೇಕು.
* ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಿ, 2024-25ನೇ ಸಾಲಿನ ಹೆಚ್ಚುವರಿ ಮಾಸಿಕ ₹1,500ರ ಒಂದು ವರ್ಷದ ಬಾಕಿ ನೀಡಬೇಕು.
* ಎನ್ಐಒಎಸ್ ತರಬೇತಿ ಪೂರ್ಣಗೊಳಿಸಿದ ಆಶಾ ಕಾರ್ಯಕರ್ತೆಯರು ಮತ್ತು ಸುಗಮಕಾರರಿಗೆ ಪ್ರತಿ ತರಬೇತಿಗೆ ₹5 ಸಾವಿರ ವಿಶೇಷ ಪ್ರೋತ್ಸಾಹಧನ ನೀಡಬೇಕು.
* ತೀವ್ರ ಅನಾರೋಗ್ಯದ ಚಿಕಿತ್ಸಾ ಅವಧಿಯಲ್ಲಿ ಕನಿಷ್ಠ ಮೂರು ತಿಂಗಳ ಗೌರವಧನ ಹಾಗೂ ನಿಗದಿತ ಪ್ರೋತ್ಸಾಹಧನ ನೀಡಬೇಕು.
* ನಿವೃತ್ತಿ ಸೌಲಭ್ಯವನ್ನು ಪಶ್ಚಿಮ ಬಂಗಾಳದ ಮಾದರಿಯಲ್ಲಿ ₹5 ಲಕ್ಷಕ್ಕೆ ಹೆಚ್ಚಿಸಬೇಕು.
ಪ್ರತಿಭಟನೆಗೆ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಅಧ್ಯಕ್ಷತೆ ವಹಿಸಿದ್ದರು. ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್, ಎಸ್ಯುಸಿಐ (ಕಮ್ಯುನಿಸ್ಟ್) ರಾಜ್ಯ ಕಾರ್ಯದರ್ಶಿ ಕೆ. ಉಮಾ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಮುರಿಗೆಪ್ಪ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಲತಾ ಹಾಗೂ ಸಾಮಾಜಿಕ ಹೋರಾಟಗಾರ ಉಗ್ರ ನರಸಿಂಹೇಗೌಡ ಸೇರಿದಂತೆ ಹಲವರು ಭಾಗವಹಿಸಿ ಬೆಂಬಲ ಸೂಚಿಸಿದರು.
ಸಾಹಿತಿಗಳು, ಪತ್ರಕರ್ತರು, ಸಿನಿಮಾ ನಿರ್ದೇಶಕರು, ಶಿಕ್ಷಣ ತಜ್ಞರು ಹಾಗೂ ಸಾಮಾಜಿಕ ಹೋರಾಟಗಾರರು ಸೇರಿದಂತೆ ರಾಜ್ಯದ ನೂರಾರು ಗಣ್ಯರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ನೈತಿಕ ಹೊಣೆಗಾರಿಕೆಯಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷೆ ರಮಾ ಟಿ.ಸಿ. ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.