ಕಸಬಾ ಜಂಬಗಿ, ಚಿಚಖಂಡಿ ಕೆ.ಡಿ. ಗ್ರಾಮ ಪಂಚಾಯಿತಿಗಳಿಗೆ ಸಿಇಒ ಭೇಟಿ
ಬಾಗಲಕೋಟೆ, 17 ನವೆಂಬರ್ (ಹಿ.ಸ.) ಗ್ರಾಮ ಪಂಚಾಯಿತಿಗಳ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಕಾರ್ಯಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಪರಿಶೀಲಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಸಬಾ ಜಂಬಗಿ ಹಾಗೂ ಚಿಚಖಂಡಿ ಕೆ.ಡಿ. ಗ್ರಾಮ ಪಂಚಾಯಿತ
ಗ್ರಾಮ ಪಂಚಾಯತಿಗೆ ಭೇಟಿ


ಬಾಗಲಕೋಟೆ, 17 ನವೆಂಬರ್ (ಹಿ.ಸ.)

ಗ್ರಾಮ ಪಂಚಾಯಿತಿಗಳ ಆಡಳಿತ ವ್ಯವಸ್ಥೆ, ಅಭಿವೃದ್ಧಿ ಕಾರ್ಯಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಪರಿಶೀಲಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಸಬಾ ಜಂಬಗಿ ಹಾಗೂ ಚಿಚಖಂಡಿ ಕೆ.ಡಿ. ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ನಿರ್ಮೂಲನಾ ಅಧಿಕಾರಿ ರಾಘವೇಂದ್ರ ಕಲ್ಲಿಮನಿ ತಿಳಿಸಿದರು.

ಮೊದಲಿಗೆ ಕಸಬಾ ಜಂಬಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅಧಿಕಾರಿಗಳು ಪಂಚಾಯಿತಿ ವ್ಯಾಪ್ತಿಯ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದರು. ಪಂಚಾಯಿತಿಯಲ್ಲಿ ನಿರ್ವಹಿಸಲಾಗುತ್ತಿರುವ ಆಡಳಿತಾತ್ಮಕ ದಾಖಲೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಕಡತಗಳು ಹಾಗೂ ಇತರ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ಅವುಗಳ ನಿರ್ವಹಣೆ ಕುರಿತು ಮಾಹಿತಿ ಪಡೆದರು.

ನಂತರ ಕಸಬಾ ಜಂಬಗಿ ವ್ಯಾಪ್ತಿಯ ಬ್ಯಾರೇಜ್ಗೆ ಭೇಟಿ ನೀಡಿ, ಇತ್ತೀಚೆಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಬ್ಯಾರೇಜ್ನಲ್ಲಿರುವ ನೀರಿನ ಪ್ರಮಾಣ ಹಾಗೂ ನೀರಿನ ಹರಿವಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ನೀರಿನ ಲಭ್ಯತೆ ಮತ್ತು ಅದರ ಸಮರ್ಪಕ ಬಳಕೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇ-ಸ್ವತ್ತು ಅಭಿಯಾನದ ಕುರಿತು ಜಾಗೃತಿ

ಇದೇ ಸಂದರ್ಭದಲ್ಲಿ ಭೂ ಗ್ಯಾರಂಟಿ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಇ-ಸ್ವತ್ತು ಅಭಿಯಾನದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಇ-ಸ್ವತ್ತಿನ ಮಹತ್ವ ಹಾಗೂ ಅದರ ಉಪಯೋಗಗಳ ಕುರಿತು ಅರಿವು ಮೂಡಿಸಿದರು. ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವುದು, ಆಸ್ತಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವುದು ಹಾಗೂ ಸಾರ್ವಜನಿಕರಿಗೆ ಕಾನೂನುಬದ್ಧ ದಾಖಲೆಗಳನ್ನು ಒದಗಿಸುವ ನಿಟ್ಟಿನಲ್ಲಿ ಇ-ಸ್ವತ್ತು ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಬಳಿಕ ಚಿಚಖಂಡಿ ಕೆ.ಡಿ. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅಧಿಕಾರಿಗಳು ಪಂಚಾಯಿತಿಯಲ್ಲಿನ ವಿವಿಧ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿದರು. ಆಡಳಿತಾತ್ಮಕ ಕಾರ್ಯವೈಖರಿ ಮತ್ತು ದಾಖಲೆಗಳ ನಿರ್ವಹಣೆ ಕುರಿತು ಮಾಹಿತಿ ಪಡೆದರು. ಅಲ್ಲಿಯೂ ಭೂ ಗ್ಯಾರಂಟಿ ಯೋಜನೆಯಡಿ ನಡೆಯುತ್ತಿರುವ ಇ-ಸ್ವತ್ತು ಅಭಿಯಾನದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಇ-ಸ್ವತ್ತು ನೋಂದಣಿ ಹಾಗೂ ಅದರ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತಾತ್ಮಕ ಕಾರ್ಯಗಳು ಸಮರ್ಪಕವಾಗಿ ನಡೆಯಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಸಾರ್ವಜನಿಕರಿಗೆ ಅಗತ್ಯ ದಾಖಲೆಗಳು ಸಕಾಲದಲ್ಲಿ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಈ ಭೇಟಿ ಹಾಗೂ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಎರಡೂ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande