ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದಿದ್ದರೆ ಬೆಳಗಾವಿ ಅಧಿವೇಶನದಲ್ಲಿ ರೈತರಿಂದ ಮುತ್ತಿಗೆ: ಪೀರು ಕೀರೂರು ಎಚ್ಚರಿಕೆ
ಬಾಗಲಕೋಟೆ, 17 ನವೆಂಬರ್ (ಹಿ.ಸ.) ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ರೈತರು ಒಗ್ಗೂಡಿ ಸರ್ಕಾರಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ರೈತ ಮುಖಂಡ ಪೀರು ಕೀರೂರು ಎಚ್ಚರಿಕೆ ನೀಡಿದ್ದಾರೆ. ಸುದ್ದ
ಕಬ್ಬಿನ ಹೋರಾಟ


ಬಾಗಲಕೋಟೆ, 17 ನವೆಂಬರ್ (ಹಿ.ಸ.)

ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ರೈತರು ಒಗ್ಗೂಡಿ ಸರ್ಕಾರಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ರೈತ ಮುಖಂಡ ಪೀರು ಕೀರೂರು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 1,000 ರೂ. ನೀಡಲು ಆಗ್ರಹ

ಕೃಷಿ ವೆಚ್ಚ, ರಸಗೊಬ್ಬರ, ಕೀಟನಾಶಕ ಹಾಗೂ ಕಾರ್ಮಿಕರ ಕೂಲಿ ದರಗಳು ಗಣನೀಯವಾಗಿ ಏರಿಕೆಯಾಗಿವೆ. ಇದರಿಂದ ಕಬ್ಬು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಪ್ರತಿ ಟನ್ ಕಬ್ಬಿಗೆ 1,000 ರೂ. ಹೆಚ್ಚುವರಿ ಪ್ರೋತ್ಸಾಹಧನ ಘೋಷಿಸಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರದಿದ್ದರೆ ತೀವ್ರ ಹೋರಾಟ

ರೈತರ ತಾಳ್ಮೆಯನ್ನು ಸರ್ಕಾರ ಪರೀಕ್ಷಿಸಬಾರದು. ರೈತರು ಶಾಂತಿಯುತವಾಗಿ ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಸರ್ಕಾರ ಪ್ರಮುಖ ಬೇಡಿಕೆಗೆ ಸ್ಪಂದಿಸದಿದ್ದರೆ ಬೆಳಗಾವಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಮೂಲೆಮೂಲೆಗಳಿಂದ ಲಕ್ಷಾಂತರ ರೈತರು ಆಗಮಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಎಚ್ಚರಿಸಿದರು.

ಬೇಡಿಕೆ ಈಡೇರುವವರೆಗೂ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪೀರು ಕೀರೂರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande