
ಬೆಂಗಳೂರು, 17 ನವೆಂಬರ್ (ಹಿ.ಸ.):
ಕರ್ನಾಟಕ ಲೋಕಸೇವಾ ಆಯೋಗವು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ಪೂರ್ವಭಾವಿ ಪರೀಕ್ಷೆ ಮುಕ್ತಾಯಗೊಂಡ ಕೇವಲ 24 ಗಂಟೆಗಳ ಒಳಗಾಗಿ ಅಭ್ಯರ್ಥಿಗಳ ಸ್ಕ್ಯಾನ್ ಮಾಡಿದ ಒಎಂಆರ್ ಉತ್ತರ ಪತ್ರಿಕೆಗಳನ್ನು ಆಯೋಗದ ಅಂತರ್ಜಾಲ ತಾಣದಲ್ಲಿ ಪ್ರಕಟಿಸಿದೆ.
ಭಾನುವಾರ ಸಂಜೆ 4 ಗಂಟೆಗೆ ಪರೀಕ್ಷೆ ಮುಕ್ತಾಯಗೊಂಡಿತ್ತು. ಸೋಮವಾರ ಬೆಳಿಗ್ಗೆಯೇ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಅಂತರ್ಜಾಲ ತಾಣಕ್ಕೆ ಅಪ್ಲೋಡ್ ಮಾಡಲಾಗಿತ್ತು. ಆದರೆ, ಕೊಂಡಿ ಬಿಡುಗಡೆಯಾಗುತ್ತಿದ್ದಂತೆ ಲಕ್ಷಾಂತರ ಅಭ್ಯರ್ಥಿಗಳು ಏಕಕಾಲದಲ್ಲಿ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿದ ಪರಿಣಾಮ ಗಣಕಯಂತ್ರದ ಸರ್ವರ್ ಮೇಲೆ ಒತ್ತಡ ಹೆಚ್ಚಾಗಿ ತಾಣ ಸ್ಥಗಿತಗೊಂಡಿತು. ಇದರಿಂದ ಅಭ್ಯರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನು ವೀಕ್ಷಿಸಲು ಪರದಾಡುವಂತಾಯಿತು. ಬಳಿಕ ಸಂಜೆ ವೇಳೆಗೆ ಅಂತರ್ಜಾಲ ತಾಣದ ಸೇವೆ ಮತ್ತೆ ಆರಂಭವಾಯಿತು.
ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಗಳು ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು. ಅದರಲ್ಲೂ ಒಎಂಆರ್ ಉತ್ತರ ಪತ್ರಿಕೆಗಳನ್ನು ತಿದ್ದಿರುವುದು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಆರೋಪಗಳು ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು. ಈ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಈ ಬಾರಿ ಹೆಚ್ಚಿನ ಮುನ್ನೆಚ್ಚರಿಕೆ ಮತ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತು ಮಾತನಾಡಿದ ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು, ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಪ್ರಕಟಿಸಲಾಗಿದೆ. ಉತ್ತರ ಕೀ ಪ್ರಕಟಿಸಿದ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗುತ್ತದೆ. ಮುಂದೆ ಉತ್ತರ ಪತ್ರಿಕೆಗಳನ್ನು ತಿದ್ದಲಾಗಿದೆ ಎಂಬ ಆಕ್ಷೇಪಗಳು ಕೇಳಿಬರಬಾರದು ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಒಟ್ಟು 12 ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ 12 ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿಯೇ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ಪರೀಕ್ಷೆ ಮುಗಿದ ಮರುದಿನವೇ ಒಎಂಆರ್ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಪ್ರಕಟಿಸುವ ಮೂಲಕ ಕರ್ನಾಟಕ ಲೋಕಸೇವಾ ಆಯೋಗ ಪಾರದರ್ಶಕತೆಗೆ ಆದ್ಯತೆ ನೀಡಿದೆ. ಆದರೆ, ಅಭ್ಯರ್ಥಿಗಳು ಏಕಕಾಲದಲ್ಲಿ ಭೇಟಿ ನೀಡಿದಾಗ ಅಂತರ್ಜಾಲ ತಾಣ ಸ್ಥಗಿತಗೊಂಡಿರುವುದು ಆಯೋಗದ ತಾಂತ್ರಿಕ ವ್ಯವಸ್ಥೆಯ ಸಾಮರ್ಥ್ಯದ ಬಗ್ಗೆ ಚರ್ಚೆಗೆ ಕಾರಣವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R