ಬದಲಾದ ಜೀವನಶೈಲಿ, ಆಹಾರ ಪದ್ಧತಿಯಿಂದ ಭಾರತ ಮಧುಮೇಹ ರಾಜಧಾನಿಯಾಗುತ್ತಿರುವುದು ಕಳವಳಕಾರಿ: ಡಾ. ತೇಜಶ್ವಿನಿ ವಲ್ಲಭ
ವಿಜಯಪುರ, 17 ನವೆಂಬರ್ (ಹಿ.ಸ.) ಆಧುನಿಕ ಜೀವನಶೈಲಿಯಲ್ಲಿನ ಬದಲಾವಣೆ ಹಾಗೂ ಆಹಾರ ಪದ್ಧತಿಯ ಪರಿಣಾಮವಾಗಿ ಭಾರತವು ವಿಶ್ವದ ಮಧುಮೇಹ ರಾಜಧಾನಿಯಾಗಿ ಮಾರ್ಪಡುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ ಎಂದು ಬಿ.ಎಲ್.ಡಿ.ಇ ಪರಿಗಣಿತ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ
ಮಧುಮೇಹಿ ದಿನಾಚರಣೆ


ವಿಜಯಪುರ, 17 ನವೆಂಬರ್ (ಹಿ.ಸ.)

ಆಧುನಿಕ ಜೀವನಶೈಲಿಯಲ್ಲಿನ ಬದಲಾವಣೆ ಹಾಗೂ ಆಹಾರ ಪದ್ಧತಿಯ ಪರಿಣಾಮವಾಗಿ ಭಾರತವು ವಿಶ್ವದ ಮಧುಮೇಹ ರಾಜಧಾನಿಯಾಗಿ ಮಾರ್ಪಡುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ ಎಂದು ಬಿ.ಎಲ್.ಡಿ.ಇ ಪರಿಗಣಿತ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಆತಂಕ ವ್ಯಕ್ತಪಡಿಸಿದರು.

ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಪರಿಗಣಿತ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಉಚಿತ ಮಧುಮೇಹ ತಪಾಸಣೆ, ಚಿಕಿತ್ಸೆ ಹಾಗೂ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿಕಿತ್ಸೆಗಿಂತ ರೋಗ ತಡೆಗಟ್ಟುವಿಕೆಯೇ ಮುಖ್ಯ

ದೇಶದಲ್ಲಿ ಬದಲಾದ ಜೀವನಶೈಲಿಯಿಂದಾಗಿ ಮಧುಮೇಹಿಗಳ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಆರಂಭಿಕ ಹಂತದಲ್ಲೇ ಕಾಯಿಲೆಯನ್ನು ಪತ್ತೆಹಚ್ಚುವುದು, ಸಕಾಲದಲ್ಲಿ ಚಿಕಿತ್ಸೆ ನೀಡುವುದು ಹಾಗೂ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ವೈದ್ಯರು ರೋಗಿಗಳಿಗೆ ಔಷಧ ನೀಡುವುದಕ್ಕೆ ಮಾತ್ರ ಸೀಮಿತವಾಗದೆ, ಆರಂಭಿಕ ತಪಾಸಣೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಬಗ್ಗೆಯೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲೂ ಆರೋಗ್ಯ ಶಿಬಿರ

ಸಾಮಾನ್ಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ವಿಜಯಕುಮಾರ್ ವಾರದ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ. ಮಧುಮೇಹದ ಕುರಿತು ಸರಿಯಾದ ಅರಿವು ಮತ್ತು ಮುನ್ನೆಚ್ಚರಿಕೆ ವಹಿಸುವುದರಿಂದ ಕಾಯಿಲೆಯನ್ನು ಆರಂಭದಲ್ಲೇ ಪತ್ತೆಹಚ್ಚಿ ನಿಯಂತ್ರಿಸಬಹುದು ಎಂದರು.

ಈ ನಿಟ್ಟಿನಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯು ನಗರ ಪ್ರದೇಶಗಳಲ್ಲದೆ ಗ್ರಾಮೀಣ ಭಾಗಗಳಲ್ಲಿಯೂ ನಿರಂತರವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಬದ್ಧವಾಗಿದೆ ಎಂದು ತಿಳಿಸಿದರು.

ತಜ್ಞ ವೈದ್ಯರಿಂದ ಉಪನ್ಯಾಸ, ಆರೋಗ್ಯ ಸಲಹೆ

ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ತಜ್ಞ ವೈದ್ಯರು ಮಧುಮೇಹ ನಿಯಂತ್ರಣದ ಕುರಿತು ಮಹತ್ವದ ಮಾಹಿತಿ ನೀಡಿದರು.

ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಜ್ಯೋತಿ ಅವರು ಮಧುಮೇಹ ನಿಯಂತ್ರಣ ಹಾಗೂ ದೇಹದ ಚಯಾಪಚಯ ಕ್ರಿಯೆಯನ್ನು ಸುಸ್ಥಿತಿಯಲ್ಲಿಡುವಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಮಧುಮೇಹದ ಪ್ರಮುಖ ಲಕ್ಷಣಗಳು, ಸಾಮಾನ್ಯ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹಾಗೂ ಆರಂಭಿಕ ಹಂತದಲ್ಲಿಯೇ ಕಾಯಿಲೆಯನ್ನು ಪತ್ತೆಹಚ್ಚುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಮಧುಮೇಹವನ್ನು ನಿರ್ಲಕ್ಷಿಸಿದರೆ ದೇಹದ ಪ್ರಮುಖ ಅಂಗಾಂಗಗಳ ಮೇಲೆ ದೀರ್ಘಕಾಲೀನ ಪರಿಣಾಮ ಉಂಟಾಗುವುದಲ್ಲದೆ, ಹಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ಎಚ್ಚರಿಸಿದರು. ಮಧುಮೇಹಿಗಳು ಅನುಸರಿಸಬೇಕಾದ ಸಮತೋಲಿತ ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯ ವೈದ್ಯಾಧಿಕಾರಿ ಈರಣ್ಣ ಸೇರಿದಂತೆ ಹಲವು ವೈದ್ಯರು ಉಪಸ್ಥಿತರಿದ್ದರು. ರೋಗಿಗಳು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಬೋಧಕ ವರ್ಗದವರು ಸೇರಿದಂತೆ ಸುಮಾರು 70ರಿಂದ 80 ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಚಿತ ಮಧುಮೇಹ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande