
ಬೆಂಗಳೂರು, 17 ನವೆಂಬರ್ (ಹಿ.ಸ.):
ಶಾಲಾ ಮಕ್ಕಳ ಮುಂದೆ ರಾಜಕೀಯ ಹಾಗೂ ದ್ವೇಷಪೂರಿತ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಯಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸಾಮಾನ್ಯ ತಿಳಿವಳಿಕೆಯೂ ಶಾಸಕ ಹರೀಶ್ ಪೂಂಜಾ ಅವರಿಗೆ ಇರಬೇಕಿತ್ತು.
ಶಾಲಾ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿರುವುದು ಖಂಡನೀಯ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಟೀಕಿಸಿದರು.
ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಮಾತ್ರ ಸೀಮಿತಗೊಳಿಸಬೇಕು. ಶಾಲೆಗಳು ಪವಿತ್ರವಾದ ಸ್ಥಳಗಳಾಗಿದ್ದು, ಅಲ್ಲಿ ರಾಜಕೀಯ ಮಾತನಾಡುವ ಅಗತ್ಯವೇನಿದೆ? ಶಾಸಕರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ.
ಶಾಲಾ ಮಕ್ಕಳ ಮೇಲೆ ಇಂತಹ ಮಾತುಗಳು ಪರಿಣಾಮ ಬೀರಬಹುದು. ಹೀಗಾಗಿ ಶಿಕ್ಷಣ ಸಂಸ್ಥೆಗಳನ್ನು ರಾಜಕೀಯದಿಂದ ದೂರವಿಡಬೇಕು ಎಂದು ಹೇಳಿದರು.
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಅವಾಚ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಮಾತನಾಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಅಧಿಕಾರಿಗಳಿಂದ ವರದಿ ನೀಡುವಂತೆ ಸೂಚಿಸಲಾಗಿದೆ. ವರದಿ ಪರಿಶೀಲಿಸಿದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ವಿಚಾರವನ್ನು ಸರ್ಕಾರ ಸುಮ್ಮನೆ ಬಿಡುವುದಿಲ್ಲ. ಸಾರ್ವಜನಿಕರು ದೂರು ನೀಡಲು ಮುಂದೆ ಬಂದರೆ ಸ್ವಾಗತಿಸುತ್ತೇವೆ. ಆದರೆ, ಯಾರಾದರೂ ದೂರು ನೀಡುವವರೆಗೆ ಕಾಯುವುದಿಲ್ಲ. ಶಿಕ್ಷಣ ಇಲಾಖೆಯ ವತಿಯಿಂದಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಶಾಲೆಗಳು ದೇವಸ್ಥಾನಗಳಿದ್ದಂತೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸುವ ಅಗತ್ಯವಿರಲಿಲ್ಲ. ಈಗಾಗಲೇ ರಾಜಕೀಯ ಉದ್ದೇಶಗಳಿಗೆ ದೇವಸ್ಥಾನಗಳನ್ನು ಬಳಸಿಕೊಂಡಿರುವವರು ಇದೀಗ ಶಾಲೆಗಳಿಗೂ ರಾಜಕೀಯವನ್ನು ಕೊಂಡೊಯ್ಯುತ್ತಿದ್ದಾರೆ. ಜನರು ಇಂತಹ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಶಿಕ್ಷಣ ಸಚಿವನಾಗಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಕಾನೂನಿನ ಪ್ರಕಾರ ಕೈಗೊಳ್ಳಬೇಕಾದ ಕ್ರಮವನ್ನು ಖಂಡಿತ ಕೈಗೊಳ್ಳುತ್ತೇವೆ ಎಂದು ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು.
ಏನಿದು ಘಟನೆ?
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ಅಭಿನಂದನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಬೆಳ್ತಂಗಡಿಗೆ ಕಾಂಗ್ರೆಸ್ ಪಕ್ಷ ಒಂದು ರೂಪಾಯಿ ಅನುದಾನವನ್ನೂ ನೀಡಿಲ್ಲ ಎಂದು ಆರೋಪಿಸಿದ್ದ ಅವರು, ಕಾರ್ಯಕ್ರಮವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸುವಂತೆ ಪ್ರಾಂಶುಪಾಲರು ಹಾಗೂ ಶಿಕ್ಷಕರ ಮೇಲೆ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂದು ದೂರಿದ್ದರು.
ಅಲ್ಲದೆ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬಾರದು ಎಂದು ಶಾಲಾ ಮಕ್ಕಳ ಎದುರೇ ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R