
ವಿಜಯಪುರ, 17 ನವೆಂಬರ್ (ಹಿ.ಸ.)
ಸಿಂದಗಿ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸ್ಥಳೀಯರು ಪಶು ಆಸ್ಪತ್ರೆ ಸ್ಥಾಪಿಸುವಂತೆ ಸಲ್ಲಿಸಿದ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಅಶೋಕ್ ಮನಗೂಳಿ ಅವರು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ರೈತರು ಹಾಗೂ ಸ್ಥಳೀಯರು ತಮ್ಮ ಭಾಗದಲ್ಲಿ ಪಶು ಆಸ್ಪತ್ರೆ ಇಲ್ಲದಿರುವುದರಿಂದ ಜಾನುವಾರುಗಳ ಆರೋಗ್ಯ ತಪಾಸಣೆ, ಚಿಕಿತ್ಸೆ ಸೇರಿದಂತೆ ವಿವಿಧ ಸೇವೆಗಳನ್ನು ಪಡೆಯಲು ತೊಂದರೆಯಾಗುತ್ತಿದೆ. ಆದ್ದರಿಂದ ಸಿಂದಗಿ ಭಾಗದಲ್ಲಿ ಪಶು ಆಸ್ಪತ್ರೆ ಸ್ಥಾಪಿಸಬೇಕೆಂದು ಶಾಸಕರ ಗಮನಕ್ಕೆ ತಂದರು.
ಈ ಬೇಡಿಕೆಗೆ ಸ್ಪಂದಿಸಿದ ಶಾಸಕರು, ಸುಮಾರು 5,000 ಜನಸಂಖ್ಯೆ ಹೊಂದಿರುವ ಪಂಚಾಯಿತಿ ವ್ಯಾಪ್ತಿಗೆ ಒಂದು ಪಶು ಆಸ್ಪತ್ರೆ ನಿರ್ಮಿಸಲು ಅವಕಾಶವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ಅಥವಾ ಮೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯನ್ನು ಒಟ್ಟಾಗಿ ಪರಿಗಣಿಸಿ, ಸೂಕ್ತ ಸ್ಥಳ ಹಾಗೂ ಜನಸಂಖ್ಯೆಯ ಆಧಾರದ ಮೇಲೆ ಸಮಗ್ರ ಸರ್ವೇ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ವೇ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಪಶು ಆಸ್ಪತ್ರೆ ಸ್ಥಾಪನೆಗೆ ಅಗತ್ಯವಿರುವ ಮಾನದಂಡಗಳು, ಮೂಲಸೌಕರ್ಯ, ಸೌಲಭ್ಯಗಳು ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.
ಅಧಿಕಾರಿಗಳಿಂದ ವರದಿ ಸ್ವೀಕರಿಸಿದ ನಂತರ ಸರ್ಕಾರಕ್ಕೆ ವಾಸ್ತವಿಕ ಮಾಹಿತಿ ಸಲ್ಲಿಸಿ, ಪಶು ಆಸ್ಪತ್ರೆ ಮಂಜೂರಾತಿ ಪಡೆಯಲು ಅಗತ್ಯ ಪ್ರಯತ್ನ ನಡೆಸಲಾಗುವುದು. ಮಂಜೂರಾತಿ ದೊರೆತ ಬಳಿಕ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭಿಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ.
ಪಶುಸಂಗೋಪನೆಯನ್ನೇ ಜೀವನಾಧಾರವಾಗಿಸಿಕೊಂಡಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಪಶುವೈದ್ಯಕೀಯ ಸೇವೆ ದೊರೆಯುವಂತಾಗಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆ ಮತ್ತು ಪಶುಸಂಗೋಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪಶು ಆಸ್ಪತ್ರೆ ಸ್ಥಾಪನೆ ಮಹತ್ವದ ಹೆಜ್ಜೆಯಾಗಲಿದೆ ಎಂಬ ನಿರೀಕ್ಷೆ ಸ್ಥಳೀಯರಲ್ಲಿ ಮೂಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande