
ಕಲಬುರಗಿ, 18 ನವೆಂಬರ್ (ಹಿ.ಸ.):
ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 100 ಕ್ವಿಂಟಲ್ ಹತ್ತಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಾಸರಭೋಸಗಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಶರಣಪ್ಪ ಗುರುಬಸಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಸಂಗ್ರಹಿಸಿಡಲಾಗಿದ್ದ ಹತ್ತಿಗೆ ಬೆಂಕಿ ತಗುಲಿದೆ. ರೈತನ ಕಣ್ಣೆದುರೇ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಸುಮಾರು 10 ಲಕ್ಷ ರೂ. ಮೌಲ್ಯದ 100 ಕ್ವಿಂಟಲ್ ಹತ್ತಿ ಸಂಪೂರ್ಣ ಸುಟ್ಟುಹೋಗಿದೆ. ಇದರಿಂದ ರೈತರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.
ಕಿಡಿಗೇಡಿಗಳ ಕೃತ್ಯದ ಶಂಕೆ:
ಹತ್ತಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಅಥವಾ ಯಾರಾದರೂ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕಿಡಿಗೇಡಿಗಳೇ ಹತ್ತಿಗೆ ಬೆಂಕಿ ಇಟ್ಟಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಸಂಗ್ರಹಿಸಿಟ್ಟಿದ್ದ ಹತ್ತಿ ಸಂಪೂರ್ಣ ಸುಟ್ಟುಹೋಗಿತ್ತು.
ಕಷ್ಟಪಟ್ಟು ಬೆಳೆದ ಹತ್ತಿಯನ್ನು ಸಂಗ್ರಹಿಸಿಟ್ಟಿದ್ದ ರೈತರಿಗೆ ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಷ್ಟದ ಅಂದಾಜು ಮಾಡಬೇಕು. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಈ ಘಟನೆ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡದ ನಿಖರ ಕಾರಣ ತಿಳಿದುಬರಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R