


ಕುರುಗೋಡು, 18 ನವೆಂಬರ್ (ಹಿ.ಸ.)
ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮದ ಜೊತೆಗೆ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕುರುಗೋಡು ತಾಲೂಕಿನ ಗೆಣಿಕೆಹಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಅರಿವು ಕಾರ್ಯಕ್ರಮ ನಡೆಯಿತು.
ಭಾರತ ಮತ್ತು ಕರ್ನಾಟಕ ಸರ್ಕಾರಗಳ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಬಾಲ ಹಾಗೂ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯು 2007ರ ಜನವರಿ 11ರಿಂದ ಜಾರಿಗೆ ಬಂದಿದೆ. ಹೆಣ್ಣುಮಕ್ಕಳಿಗೆ 18 ವರ್ಷ ಹಾಗೂ ಗಂಡುಮಕ್ಕಳಿಗೆ 21 ವರ್ಷ ಪೂರ್ಣಗೊಳ್ಳುವ ಮೊದಲು ನಡೆಯುವ ವಿವಾಹವನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಕಾಯ್ದೆ ಉಲ್ಲಂಘಿಸಿದವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವ ಪೋಷಕರು, ಪುರೋಹಿತರು ಹಾಗೂ ವಿವಾಹಕ್ಕೆ ಸಹಕರಿಸುವವರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಇಂತಹ ಘಟನೆಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ಅಥವಾ ತುರ್ತು ಸೇವೆ 112ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.
ಗೆಣಿಕೆಹಾಳ್ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ರೇಣುಕಾ ಮಾತನಾಡಿ, ಬಾಲ್ಯ ವಿವಾಹದಿಂದ ಕಿಶೋರಿಯರಲ್ಲಿ ರಕ್ತಹೀನತೆ, ತಾಯಿ ಮತ್ತು ಶಿಶು ಮರಣ, ಅವಧಿಪೂರ್ವ ಹೆರಿಗೆ ಹಾಗೂ ಕಡಿಮೆ ತೂಕದ ಮಕ್ಕಳ ಜನನದಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ವಯಸ್ಸಿಗೆ ತಕ್ಕ ದೈಹಿಕ, ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಅವಕಾಶ ನೀಡುವುದು ಅಗತ್ಯ ಎಂದು ಹೇಳಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಷಡಕ್ಷರಯ್ಯ ಮಾತನಾಡಿ, ಹದಿಹರೆಯದವರ ಸ್ನೇಹಿ ಆರೋಗ್ಯ ಕೇಂದ್ರವಾದ 'ಸ್ನೇಹಾ ಕ್ಲಿನಿಕ್' ಕುರಿತು ಮಾಹಿತಿ ನೀಡಿದರು. 10ರಿಂದ 19 ವರ್ಷದೊಳಗಿನ ಮಕ್ಕಳು ತಮ್ಮ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ 104 ಸಹಾಯವಾಣಿ ಅಥವಾ 'ಹಲೋ ಮೈತ್ರಿ' 08047104234 ಸಂಖ್ಯೆಯನ್ನು ಸಂಪರ್ಕಿಸಿ ಸಲಹೆ ಪಡೆಯಬಹುದು ಎಂದರು.
ಹದಿಹರೆಯದವರು ವಾರಕ್ಕೊಮ್ಮೆ ಕಬ್ಬಿಣ ಮತ್ತು ಫೋಲಿಕ್ ಆಮ್ಲದ ಮಾತ್ರೆಗಳನ್ನು ಹಾಗೂ ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಕ ಮಾತ್ರೆಗಳನ್ನು ಸೇವಿಸುವ ಅಗತ್ಯದ ಕುರಿತು ಅರಿವು ಮೂಡಿಸಿದರು.
ಆಪ್ತ ಸಮಾಲೋಚಕ ಮಹಬೂಬ್ ಭಾಷಾ ಅವರು ವೈಯಕ್ತಿಕ ಸ್ವಚ್ಛತೆ, ಸಮತೋಲಿತ ಆಹಾರ, ಸ್ಯಾನಿಟರಿ ಪ್ಯಾಡ್ಗಳ ಬಳಕೆ ಮತ್ತು ಸುರಕ್ಷಿತ ವಿಲೇವಾರಿ ಕುರಿತು ಕರಪತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹುಸೇನ್ ಭಾಷಾ, ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್