
ಬೆಂಗಳೂರು, 18 ನವೆಂಬರ್ (ಹಿ.ಸ.):
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಅವರ ಸ್ಥಾನಕ್ಕೆ ಆರ್. ಹಿತೇಶ್ ರೈ ಅವರನ್ನು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ಸರ್ಕಾರ, ಒಟ್ಟು 32 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬದಲಾವಣೆ ಪ್ರಮುಖವಾಗಿದೆ.
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಸಂಚಾರ ದಟ್ಟಣೆ, ಅಪರಾಧ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳ ಹಿನ್ನೆಲೆಯಲ್ಲಿ ಪೊಲೀಸ್ ಆಡಳಿತ ವ್ಯವಸ್ಥೆಯ ಪುನರ್ರಚನೆಗೂ ಸರ್ಕಾರ ಮುಂದಾಗಿದೆ.
ಇದರ ಭಾಗವಾಗಿ ಬೆಂಗಳೂರನ್ನು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಎಂಬ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್ಗಳಾಗಿ ವಿಂಗಡಿಸುವ ಯೋಜನೆ ರೂಪಿಸಲಾಗಿದೆ. ಐದು ವಿಭಾಗಗಳಿಗೆ ಪ್ರತ್ಯೇಕ ಪೊಲೀಸ್ ಆಯುಕ್ತರನ್ನು ನೇಮಕ ಮಾಡಿ, ಅವರ ಮೇಲ್ವಿಚಾರಣೆಗಾಗಿ ಮುಖ್ಯ ಪೊಲೀಸ್ ಆಯುಕ್ತರ ಹುದ್ದೆ ಇರಿಸುವ ಉದ್ದೇಶ ಹೊಂದಲಾಗಿದೆ.
ನಗರದ ಪೊಲೀಸ್ ಆಡಳಿತವನ್ನು ವಿಕೇಂದ್ರೀಕರಿಸಿ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವುದು, ಅಪರಾಧ ನಿಯಂತ್ರಣ ಹಾಗೂ ಸಂಚಾರ ನಿರ್ವಹಣೆಯನ್ನು ಸುಧಾರಿಸುವುದು ಈ ಪುನರ್ರಚನೆಯ ಪ್ರಮುಖ ಉದ್ದೇಶವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R