ನ.21ರಂದು ಹುನಗುಂದದಲ್ಲಿ ಪ್ರಜಾ ಸೇವಾ ಆಂದೋಲನ
ಬಾಗಲಕೋಟೆ, 18 ನವೆಂಬರ್ (ಹಿ.ಸ.) ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಇಲಾಖೆಗಳ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಸದಾ ಸಹಕಾರ” ಎಂಬ ಧ್ಯೇಯವಾಕ್ಯದಡಿ ನವೆಂಬರ್ 21ರಂದು ಹುನಗುಂದ ನಗರದಲ್ಲಿ ಪ್ರಜಾ ಸೇವಾ
ಪ್ರಜಾ ಸೇವೆ


ಬಾಗಲಕೋಟೆ, 18 ನವೆಂಬರ್ (ಹಿ.ಸ.)

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಇಲಾಖೆಗಳ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಸದಾ ಸಹಕಾರ” ಎಂಬ ಧ್ಯೇಯವಾಕ್ಯದಡಿ ನವೆಂಬರ್ 21ರಂದು ಹುನಗುಂದ ನಗರದಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ.

ಹುನಗುಂದ ನಗರದ ಟಿಸಿಎಚ್ ಆವರಣದಲ್ಲಿ ಶನಿವಾರ ಈ ಕಾರ್ಯಕ್ರಮ ನಡೆಯಲಿದ್ದು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳು ಮತ್ತು ಸೇವೆಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ತಲುಪಿಸುವುದು ಹಾಗೂ ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಈ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ, ಸಾಮಾಜಿಕ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ನೇರವಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಂದೆ ಸಲ್ಲಿಸಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ.

ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಸ್ವರೂಪಕ್ಕೆ ಅನುಗುಣವಾಗಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿ, ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶವೂ ಇದೆ.

ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಪಾರದರ್ಶಕ ಆಡಳಿತ ಮತ್ತು ಜನಸ್ನೇಹಿ ಸೇವೆಗೆ ಆದ್ಯತೆ ನೀಡಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದ್ದಾರೆ.

ಆದ್ದರಿಂದ ಹುನಗುಂದ ತಾಲೂಕಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಜಾ ಸೇವಾ ಆಂದೋಲನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande