ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು, 18 ನವೆಂಬರ್ (ಹಿ.ಸ.): ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ, ಬೀದರ್ ಹಾಗೂ ಹುಬ್ಬಳ್ಳಿಯಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳು ಮತ
ಸಾಂಕೇತಿಕ


ಬೆಂಗಳೂರು, 18 ನವೆಂಬರ್ (ಹಿ.ಸ.):

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ, ಬೀದರ್ ಹಾಗೂ ಹುಬ್ಬಳ್ಳಿಯಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಸೇರಿದ ನಿವಾಸ, ಕಚೇರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಹಾಸನದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಅವರ ಚಿಕ್ಕಹೊನ್ನೇನಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರಿಗೆ ಸೇರಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಡಾ. ರವೀಂದ್ರ ಅವರ ಚಳ್ಳಕೆರೆ ರಸ್ತೆಯಲ್ಲಿರುವ ನಿವಾಸ ಹಾಗೂ ಅಕ್ಷಯ ಗ್ಲೋಬಲ್ ಆಸ್ಪತ್ರೆ, ವೆಂಕಟೇಶ್ ಅವರ ವಿದ್ಯಾನಗರದ ನಿವಾಸ ಮತ್ತು ಮಹಾಲಕ್ಷ್ಮಿ ನಿವಾಸದಲ್ಲಿ ಶೋಧ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ಮತ್ತು ಡಿವೈಎಸ್‌ಪಿ ಕಲಾವತಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಪಂಚಾಯಿತಿಯ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜೀವ ಹಿಪ್ಪರಗಿ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆದಿದೆ. ಈ ಹಿಂದೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅವರ ವಿಜಯನಗರ ಪ್ರದೇಶದ ಮನೆ ಹಾಗೂ ಮೈಗೂರು ರಸ್ತೆಯಲ್ಲಿರುವ ತಂದೆಯ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಲೋಕಾಯುಕ್ತ ಎಸ್‌ಪಿ ಮಹಾಲಿಂಗ ನಂದಗಾವಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಕೊಪ್ಪಳದ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ರಾಜಕುಮಾರ್ ಮಾಳಗೆ ಅವರಿಗೆ ಸೇರಿದ ಗುರುನಗರದ ನಿವಾಸ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದ ತಂಡ ಆಸ್ತಿ ದಾಖಲೆಗಳನ್ನು ಪರಿಶೀಲಿಸಿದೆ.

ಹುಬ್ಬಳ್ಳಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ನಿರ್ವಾಹಕ ಷಡಕ್ಷರಯ್ಯ ಅವರ ಗಾಂಧಿನಗರದ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದಿರುವ ಈ ಕಾರ್ಯಾಚರಣೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ನೌಕರರ ಆಸ್ತಿ-ಪಾಸ್ತಿ, ಹಣಕಾಸು ವಹಿವಾಟು ಹಾಗೂ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande