ಜಮಖಂಡಿ ತಾ.ಪಂ. ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ
ಬಾಗಲಕೋಟೆ, 18 ನವೆಂಬರ್ (ಹಿ.ಸ.) ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಜಮಖಂಡಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಅವರ ವಿರುದ್ಧ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಲೋಕಾಯುಕ್ತ
ಲೋಕ ದಾಳಿ


ಬಾಗಲಕೋಟೆ, 18 ನವೆಂಬರ್ (ಹಿ.ಸ.)

ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಜಮಖಂಡಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಅವರ ವಿರುದ್ಧ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಜಮಖಂಡಿ ಪಟ್ಟಣದಲ್ಲಿ ಸಂಜೀವ್ ಹಿಪ್ಪರಗಿ ಅವರು ವಾಸವಿರುವ ಮನೆ ಹಾಗೂ ಅವರ ತಂದೆ ವಾಸಿಸುವ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಶೋಧನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿರುವ ಕುರಿತು ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಎರಡು ಮನೆಗಳಲ್ಲಿ ದಾಖಲೆಗಳ ಪರಿಶೀಲನೆ

ಲೋಕಾಯುಕ್ತ ಅಧಿಕಾರಿಗಳ ತಂಡ ಎರಡೂ ಮನೆಗಳಲ್ಲಿ ಶೋಧನೆ ನಡೆಸಿ ಆಸ್ತಿ ಸಂಬಂಧಿತ ದಾಖಲೆಗಳು, ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ಪತ್ರಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಅಧಿಕಾರಿಗಳು ಆಸ್ತಿಗಳ ವಿವರ, ದಾಖಲೆಗಳ ಸ್ವರೂಪ ಮತ್ತು ಆರೋಪಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಮೂರು ಜಿಲ್ಲೆಗಳ ಲೋಕಾಯುಕ್ತ ತಂಡ ಭಾಗಿ

ಈ ಕಾರ್ಯಾಚರಣೆಯಲ್ಲಿ ಬಾಗಲಕೋಟೆ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದಾರೆ. ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿದೆ.

ಈ ಕುರಿತು ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ಅವರು ಮಾಹಿತಿ ನೀಡಿ, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧನಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸದ್ಯ ಎರಡೂ ಮನೆಗಳಲ್ಲಿ ಶೋಧನಾ ಕಾರ್ಯ ಮುಂದುವರಿದಿದ್ದು, ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಪತ್ತೆಯಾದ ಆಸ್ತಿ ಮತ್ತು ದಾಖಲೆಗಳ ವಿವರ ಸೇರಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande