ಕುಡಿಯುವ ನೀರಿಗಾಗಿ ಇಲಕಲ್ಲನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಬಾಗಲಕೋಟೆ, 18 ನವೆಂಬರ್ (ಹಿ.ಸ.) ಇಳಕಲ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಜನತೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ಹಾಗೂ ಸ್
ನೀರಿಗಾಗಿ ಪ್ರತಿಭಟನೆ


ಬಾಗಲಕೋಟೆ, 18 ನವೆಂಬರ್ (ಹಿ.ಸ.)

ಇಳಕಲ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಜನತೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ಹಾಗೂ ಸ್ಥಳೀಯ ಆಡಳಿತ ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಂಚರಿಸಿ, ಕೊನೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಸರ್ಕಾರದ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.

ಜನರ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದ ನಿರ್ಲಕ್ಷ್ಯ ಆರೋಪ

ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಅವಶ್ಯಕತೆಯಾಗಿದೆ. ಆದರೆ, ಬೇಸಿಗೆಯ ಸಂದರ್ಭ ಸೇರಿದಂತೆ ಜನರಿಗೆ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಮುಂಚಿತವಾಗಿ ಅಂದಾಜಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಸರ್ಕಾರ, ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಹಣ ಹೊಂದಿಸುವುದರಲ್ಲಿಯೇ ಮಗ್ನವಾಗಿದ್ದು, ಜನರಿಗೆ ಅಗತ್ಯವಿರುವ ಕುಡಿಯುವ ನೀರು ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಜನರ ದೈನಂದಿನ ಬದುಕಿಗೆ ಅಗತ್ಯವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜಕೀಯ ಭರವಸೆಗಳಿಗಿಂತ ಜನರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಇಲಕಲ್ಲ ನಗರದ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದರು.

ಈ ಪ್ರತಿಭಟನೆಯ ಮೂಲಕ ಕುಡಿಯುವ ನೀರಿನ ಸಮಸ್ಯೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande