
ಗದಗ, 18 ನವೆಂಬರ್ (ಹಿ.ಸ.)
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು ಗ್ರಾಮದಲ್ಲಿ ವಿಬಿ-ಜಿ-ರಾಮ್-ಜಿ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಕಾಮಗಾರಿಗೆ ಜಿಲ್ಲಾ ಹಾಗೂ ತಾಲೂಕು ಐಇಸಿ ಸಂಯೋಜಕರು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಂಯೋಜಕರು, ಕಾಮಗಾರಿಯ ಪ್ರಸ್ತುತ ಸ್ಥಿತಿ, ಕಾರ್ಮಿಕರ ಭಾಗವಹಿಸುವಿಕೆ, ಕೆಲಸದ ಗುಣಮಟ್ಟ ಹಾಗೂ ಕಾಮಗಾರಿಯ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ, ಯೋಜನೆಯ ಉದ್ದೇಶಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಬಗ್ಗೆಯೂ ಚರ್ಚಿಸಿದರು.
ವಿಬಿ-ಜಿ-ರಾಮ್-ಜಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯದ ಅಗತ್ಯಗಳಿಗೆ ಪೂರಕವಾದ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಸ್ಥಳೀಯ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ಹಾಗೂ ಜನರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ.
ಕಾಮಗಾರಿಗಳಲ್ಲಿ ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು, ಯೋಜನೆಯ ಸೌಲಭ್ಯಗಳ ಕುರಿತು ಗ್ರಾಮಸ್ಥರಿಗೆ ಸಮರ್ಪಕ ಮಾಹಿತಿ ನೀಡುವುದು ಹಾಗೂ ಕಾಮಗಾರಿಗಳನ್ನು ನಿಗದಿತ ಮಾನದಂಡಗಳಂತೆ ಅನುಷ್ಠಾನಗೊಳಿಸಲು ಸಂಬಂಧಿಸಿದ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ, ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಿಬ್ಬಂದಿ ಹಾಗೂ ಸ್ಥಳೀಯ ಕಾರ್ಮಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP