
ವಿಜಯಪುರ, 18 ನವೆಂಬರ್ (ಹಿ.ಸ.)
ನಿರುದ್ಯೋಗ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಜಾಗೃತಿ ಮೂಡಿಸುವುದರ ಜೊತೆಗೆ ಅಶ್ಲೀಲತೆ, ಮದ್ಯ ಹಾಗೂ ಮಾದಕ ವಸ್ತುಗಳ ಬಳಕೆ ನಿಷೇಧಿಸುವಂತೆ ಆಗ್ರಹಿಸಿ ನಾಲ್ಕನೇ ಅಖಿಲ ಭಾರತ ಯುವಜನ ಸಮ್ಮೇಳನ ಆಯೋಜಿಸಲಾಗಿದೆ.
ಈ ಸಮ್ಮೇಳನದ ಅಂಗವಾಗಿ ವಿಜಯಪುರದಲ್ಲಿ ಆಯೋಜಿಸಿದ್ದ ಬಿತ್ತಿಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ AIDYO ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಅವರು ಭಾಗವಹಿಸಿ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.
ಇಂದಿನ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆ, ಉದ್ಯೋಗಾವಕಾಶಗಳ ಕೊರತೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳು ಯುವಜನರ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿವೆ. ಅರ್ಹತೆ ಮತ್ತು ಪ್ರತಿಭೆಯ ಆಧಾರದ ಮೇಲೆ ಉದ್ಯೋಗ ದೊರೆಯುವ ವ್ಯವಸ್ಥೆ ಬಲಗೊಳ್ಳಬೇಕು ಎಂಬ ಆಶಯದೊಂದಿಗೆ ಯುವಜನರನ್ನು ಸಂಘಟಿಸುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಅಲ್ಲದೆ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವುದು, ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಗೌರವಯುತ ವಾತಾವರಣ ನಿರ್ಮಿಸುವುದು, ಅಶ್ಲೀಲತೆ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ಹಾವಳಿಯನ್ನು ನಿಯಂತ್ರಿಸುವುದು ಸೇರಿದಂತೆ ಹಲವು ಸಾಮಾಜಿಕ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಗಮನ ಸೆಳೆಯಲಾಗುತ್ತಿದೆ.
ಯುವಜನರ ಸಮಸ್ಯೆಗಳು ಹಾಗೂ ಸಾಮಾಜಿಕ ಸವಾಲುಗಳ ಕುರಿತು ಚರ್ಚಿಸಿ, ಜನಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಯುವಜನರನ್ನು ಒಗ್ಗೂಡಿಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ AIDYO ಸಂಘಟನೆಯ ಕಾರ್ಯಕರ್ತರು ಹಾಗೂ ಯುವಜನರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande