
ಬೆಂಗಳೂರು, 18 ನವೆಂಬರ್ (ಹಿ.ಸ.):
ರಾಜ್ಯದಲ್ಲಿ ಕಬ್ಬು ಖರೀದಿ, ಕಟಾವು, ಸಾಗಣೆ ಹಾಗೂ ರೈತರಿಗೆ ಸಕಾಲಿಕ ಪಾವತಿ ವಿಚಾರವಾಗಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಖರೀದಿ, ಕಟಾವು, ಸಾಗಣೆ ಮತ್ತು ಹಣ ಪಾವತಿ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರ ತಕ್ಷಣವೇ ಆಡಳಿತಾತ್ಮಕ ಮತ್ತು ಆರ್ಥಿಕ ಕ್ರಮಗಳನ್ನು ಕೈಗೊಳ್ಳಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರದಿಂದ ರೈತರ ಹಿತಾಸಕ್ತಿಗೆ ಹಲವು ಕ್ರಮ:
ಕಬ್ಬು ಬೆಳೆಗಾರರ ಹಿತಾಸಕ್ತಿ ರಕ್ಷಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ)ಯನ್ನು ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತಿದೆ.
ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಎಥೆನಾಲ್ ನೀತಿಯಲ್ಲಿ ಅಗತ್ಯ ಮಧ್ಯಸ್ಥಿಕೆಗಳನ್ನು ಮಾಡಲಾಗಿದೆ. ಅಲ್ಲದೆ, ಎಥೆನಾಲ್ ಬಡ್ಡಿ ಸಹಾಯಧನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಇದರೊಂದಿಗೆ ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಇತರ ಪಾಲುದಾರರ ಬೇಡಿಕೆ ಮತ್ತು ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನೂ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವೂ ಜವಾಬ್ದಾರಿ ನಿರ್ವಹಿಸಲಿ:
ಸಕ್ಕರೆ ಕ್ಷೇತ್ರವನ್ನು ಬಲಪಡಿಸುವುದರ ಜತೆಗೆ ಅನ್ನದಾತರ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಆದರೆ, ರಾಜ್ಯದಲ್ಲಿನ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕರ್ನಾಟಕ ಸರ್ಕಾರವೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಈ ನಿಟ್ಟಿನಲ್ಲಿ ವಿಳಂಬ ಮಾಡದೆ ತ್ವರಿತ ಆಡಳಿತಾತ್ಮಕ ಹಾಗೂ ಆರ್ಥಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R