ಇಳಕಲ್ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹37 ಕೋಟಿ ಯೋಜನೆಗೆ ಚಾಲನೆ
ಬಾಗಲಕೋಟೆ, 19 ನವೆಂಬರ್ (ಹಿ.ಸ.) ಇಳಕಲ್ ನಗರದ ಜನರನ್ನು ಹಲವು ವರ್ಷಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ₹37 ಕೋಟಿ ವೆಚ್ಚದ ಅಮೃತ್ 2.0 ಯೋಜನೆಗೆ ಸಚಿವ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು. ಇಳಕಲ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು
ಕುಡಿಯುವ ನೀರಿಗೆ ಪರಿಹಾರ


ಬಾಗಲಕೋಟೆ, 19 ನವೆಂಬರ್ (ಹಿ.ಸ.)

ಇಳಕಲ್ ನಗರದ ಜನರನ್ನು ಹಲವು ವರ್ಷಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ₹37 ಕೋಟಿ ವೆಚ್ಚದ ಅಮೃತ್ 2.0 ಯೋಜನೆಗೆ ಸಚಿವ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.

ಇಳಕಲ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಲವು ವರ್ಷಗಳಿಂದ ಗಂಭೀರವಾಗಿ ಕಾಡುತ್ತಿದ್ದು, ಸಮರ್ಪಕ ನೀರು ಪೂರೈಕೆಯಾಗದೆ ನಗರ ನಿವಾಸಿಗಳು ಪ್ರತಿನಿತ್ಯ ಪರದಾಡುವಂತಾಗಿದೆ. ಬೇಸಿಗೆ ಸಂದರ್ಭದಲ್ಲಿ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ಕುಡಿಯುವ ನೀರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ನಗರದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಅಮೃತ್ 2.0 ಯೋಜನೆಗೆ ಚಾಲನೆ ನೀಡಲಾಗಿದೆ.

₹37 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ಈ ಯೋಜನೆಯಿಂದ ನಗರದ ನೀರು ಪೂರೈಕೆ ವ್ಯವಸ್ಥೆಯಲ್ಲಿ ಸುಧಾರಣೆ ಉಂಟಾಗಿ, ಮನೆಮನೆಗೂ ಸಮರ್ಪಕ ಕುಡಿಯುವ ನೀರು ತಲುಪುವ ನಿರೀಕ್ಷೆ ಸಾರ್ವಜನಿಕರಲ್ಲಿ ಮೂಡಿದೆ.

ಬಿಜೆಪಿ ಪ್ರತಿಭಟನೆ ಬೆನ್ನಲ್ಲೇ ಯೋಜನೆಗೆ ಚಾಲನೆ?

ಇನ್ನೊಂದೆಡೆ, ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಿನ್ನೆಯಷ್ಟೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಸಚಿವ ವಿಜಯಾನಂದ ಕಾಶಪ್ಪನವರ ಅವರು ₹37 ಕೋಟಿ ಅಮೃತ್ 2.0 ಯೋಜನೆಗೆ ಚಾಲನೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಪ್ರತಿಭಟನೆಯಿಂದಾಗಿ ಸಚಿವರು ಎಚ್ಚೆತ್ತುಕೊಂಡು ಯೋಜನೆಗೆ ಚಾಲನೆ ನೀಡಿದ್ದಾರೆ ಎಂಬ ಮಾತುಗಳು ಸ್ಥಳೀಯ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಯೋಜನೆ ಆರಂಭದ ಹಿಂದಿನ ಪ್ರಕ್ರಿಯೆ ಹಾಗೂ ಪ್ರತಿಭಟನೆಯ ನಡುವಿನ ಸಂಬಂಧದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಿಲ್ಲ.

ಶಾಶ್ವತ ಪರಿಹಾರ ಸಿಕ್ಕರೆ ಸಾಕು : ನಿರ್ಮಲಾ ಬಳಿಗಾರ್

ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಸ್ಥಳೀಯ ಮಹಿಳೆ ನಿರ್ಮಲಾ ಬಳಿಗಾರ್, ಹಲವು ವರ್ಷಗಳಿಂದ ನೀರಿಗಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ಕುಡಿಯುವ ನೀರಿಗಾಗಿ ಪ್ರತಿದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ₹37 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಿರುವುದು ಸಂತೋಷದ ವಿಚಾರ. ಆದರೆ ಯೋಜನೆ ಕೇವಲ ಉದ್ಘಾಟನೆಗೆ ಸೀಮಿತವಾಗದೆ, ತ್ವರಿತವಾಗಿ ಕಾಮಗಾರಿ ಪೂರ್ಣಗೊಂಡು ಪ್ರತಿಯೊಂದು ಮನೆಗೂ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕು. ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗಿಂತ ಜನರಿಗೆ ನೀರು ಸಿಗುವುದು ಮುಖ್ಯ. ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಒಟ್ಟಿನಲ್ಲಿ, ಅಮೃತ್ 2.0 ಯೋಜನೆಯಿಂದ ಇಳಕಲ್ ನಗರದ ಜನರ ಬಹುದಿನಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಮೂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜನರಿಗೆ ನಿರಂತರ ಮತ್ತು ಸಮರ್ಪಕ ಕುಡಿಯುವ ನೀರು ಒದಗಿಸಬೇಕೆಂಬುದು ಸ್ಥಳೀಯರ ಒತ್ತಾಯವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande