
ಬಾಗಲಕೋಟೆ, 19 ನವೆಂಬರ್ (ಹಿ.ಸ.)
ಮುಧೋಳ ತಾಲೂಕಿನ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ವೈಯಕ್ತಿಕ ಶೌಚಾಲಯಗಳ ಬಳಕೆ ಕುರಿತು ವಿಶೇಷ ಜಾಗೃತಿ ಅಭಿಯಾನ ಹಾಗೂ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ಗ್ರಾಮ ಪಂಚಾಯತಿ ಸದಸ್ಯ ಪರಶುರಾಮ ಸೊನ್ನಡ ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಶೌಚಾಲಯಗಳ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಪ್ರತಿಯೊಂದು ಕುಟುಂಬವೂ ಕಡ್ಡಾಯವಾಗಿ ತಮ್ಮ ಮನೆಯಲ್ಲಿ ನಿರ್ಮಿಸಿಕೊಂಡಿರುವ ಶೌಚಾಲಯವನ್ನು ಬಳಕೆ ಮಾಡಬೇಕು. ಬಯಲು ಶೌಚ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂಬ ಸಂದೇಶವನ್ನು ಜಾಥಾದ ಮೂಲಕ ಸಾರಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಛತೆ, ವೈಯಕ್ತಿಕ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ನೈರ್ಮಲ್ಯದ ಮಹತ್ವದ ಕುರಿತು ಗ್ರಾಮಸ್ಥರಿಗೆ ತಿಳಿವಳಿಕೆ ನೀಡಲಾಯಿತು. ಶೌಚಾಲಯಗಳ ಬಳಕೆಯಿಂದ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಗ್ರಾಮದಲ್ಲಿ ಸ್ವಚ್ಛ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಯಿತು.
ಅಭಿಯಾನದ ಅಂಗವಾಗಿ ಗ್ರಾಮಸ್ಥರಿಗೆ ಪ್ರತಿಜ್ಞಾವಿಧಿ ಬೋಧಿಸಿ, ತಮ್ಮ ಮನೆಗಳಲ್ಲಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವುದರ ಜೊತೆಗೆ ನೆರೆಹೊರೆಯವರಿಗೂ ಸ್ವಚ್ಛತೆಯ ಕುರಿತು ಅರಿವು ಮೂಡಿಸುವಂತೆ ಕರೆ ನೀಡಲಾಯಿತು.
ಈ ಕುರಿತು ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯ ಪರಶುರಾಮ ಸೊನ್ನಡ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸರ್ಕಾರದ ಸ್ವಚ್ಛತಾ ಅಭಿಯಾನಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ. ಪ್ರತಿಯೊಂದು ಕುಟುಂಬವೂ ವೈಯಕ್ತಿಕ ಶೌಚಾಲಯ ಬಳಕೆಗೆ ಆದ್ಯತೆ ನೀಡುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಉತ್ತಮ ಆರೋಗ್ಯಕರ ಜೀವನಶೈಲಿ ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande