
ಚಿಕ್ಕಮಗಳೂರು, 19 ನವೆಂಬರ್ (ಹಿ.ಸ.):
ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ಶ್ರೀಮಂತರು ಮತ್ತು ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಮಂಜೇಗೌಡ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ. ಆದರೆ ಆರ್ಎಸ್ಎಸ್, ಜನಸಂಘ ಮತ್ತು ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ನೆಹರು ಕುಟುಂಬದ ವಿರುದ್ಧ ಬಿಜೆಪಿಗೆ ಹೊಟ್ಟೆಕಿಚ್ಚು ಎಂದು ಆರೋಪಿಸಿದರು.
ಇಂದಿರಾ ಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದನ್ನು ಸ್ಮರಿಸಿದ ಅವರು, ಬಡವರ ಕಲ್ಯಾಣಕ್ಕಾಗಿ 20 ಅಂಶಗಳ ಕಾರ್ಯಕ್ರಮ ಹಾಗೂ 'ಗರೀಬಿ ಹಟಾವೋ' ಘೋಷಣೆ ಜಾರಿಗೊಳಿಸಿದ್ದರು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ದೇಶದ ಸಾಲ ₹53 ಲಕ್ಷ ಕೋಟಿಯಿಂದ ₹200 ಲಕ್ಷ ಕೋಟಿಗೆ ಏರಿಕೆಯಾಗಿದೆ. ರೈತರ ಆದಾಯ ದುಪ್ಪಟ್ಟು ಹಾಗೂ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಗಳೂ ಈಡೇರಿಲ್ಲ ಎಂದು ಟೀಕಿಸಿದರು.
ಕರ್ನಾಟಕದ 240 ತಾಲೂಕುಗಳ ಪೈಕಿ 224 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ರಾಜ್ಯಕ್ಕೆ ಸುಮಾರು ₹60 ಸಾವಿರದಿಂದ ₹62 ಸಾವಿರ ಕೋಟಿ ನಷ್ಟವಾಗಿದ್ದು, ಸುಮಾರು ₹21 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ನೀಡುವುದಾಗಿ 2023–24ರ ಬಜೆಟ್ನಲ್ಲಿ ಘೋಷಿಸಿದ್ದರೂ ಇದುವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಿ ಸಮಾನತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದರೆ ಕಾಂಗ್ರೆಸ್ ಪ್ರೀತಿ, ವಿಶ್ವಾಸ ಮತ್ತು ಸಹೋದರತ್ವವನ್ನು ಬೆಳೆಸುತ್ತಿದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳನ್ನು ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಮತದಾನದ ಹಕ್ಕು ರಕ್ಷಿಸಲು ಕಾರ್ಯಕರ್ತರು ಜಾಗೃತರಾಗಿರಬೇಕು ಎಂದು ಕರೆ ನೀಡಿದರು.
ಜಿಲ್ಲೆಯಲ್ಲಿ ಪಕ್ಷ ಸಂಘಟಿಸಿದ ನಿರ್ಗಮಿತ ಅಧ್ಯಕ್ಷ ಅಂಶುಮಂತ್ ಅವರ ಸೇವೆಯನ್ನು ಶ್ಲಾಘಿಸಿದ ಅವರು, ನೂತನ ಅಧ್ಯಕ್ಷ ಮಂಜೇಗೌಡ ಅವರ ನೇತೃತ್ವದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು ಎಂದರು.
2028ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವ ಗುರಿ ಹೊಂದಬೇಕು. ತಾವು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.