
ಬಾಗಲಕೋಟೆ, 19 ನವೆಂಬರ್ (ಹಿ.ಸ.)
ಜಮಖಂಡಿ ನಗರದ ವಸಂತ ಚಿತ್ರಮಂದಿರದ ಸಮೀಪ ಸರಕು ತುಂಬಿದ ಟ್ರಕ್ ಪಲ್ಟಿಯಾದ ಪರಿಣಾಮ ಮುಧೋಳ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ನಗರದ ಮುಧೋಳ ರಸ್ತೆಯ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಸರಕು ತುಂಬಿಕೊಂಡು ಸಂಚರಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಪರಿಣಾಮ ರಸ್ತೆಯ ಒಂದು ಭಾಗದಲ್ಲಿ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಇದರಿಂದ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.
ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದರಿಂದ ವಾಹನ ಸವಾರರು, ಪ್ರಯಾಣಿಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸಿದರು. ದ್ವಿಚಕ್ರ ವಾಹನಗಳು, ಕಾರುಗಳು ಸೇರಿದಂತೆ ವಿವಿಧ ವಾಹನಗಳ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಯಿತು.
ವಿಷಯ ತಿಳಿಯುತ್ತಿದ್ದಂತೆ ಜಮಖಂಡಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಸ್ತೆಯಲ್ಲಿ ಪಲ್ಟಿಯಾಗಿದ್ದ ಟ್ರಕ್ ತೆರವುಗೊಳಿಸಲು ಕ್ರಮ ಕೈಗೊಂಡರು. ಪೊಲೀಸರ ಕಾರ್ಯಾಚರಣೆಯ ಬಳಿಕ ವಾಹನ ಸಂಚಾರಕ್ಕೆ ಮತ್ತೆ ಅನುವು ಮಾಡಿಕೊಡಲಾಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ, ವಿಶೇಷವಾಗಿ ತಿರುವುಗಳಲ್ಲಿ ಭಾರಿ ವಾಹನಗಳನ್ನು ಚಲಾಯಿಸುವಾಗ ಚಾಲಕರು ಎಚ್ಚರಿಕೆ ವಹಿಸಬೇಕು. ವೇಗ ನಿಯಂತ್ರಣದಲ್ಲಿಟ್ಟುಕೊಂಡು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಪೋಲಿಸರು ಸೂಚಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande