
ಬೆಂಗಳೂರು, 19 ನವೆಂಬರ್ (ಹಿ.ಸ.):
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.
ಪ್ರಕರಣದ ತನಿಖೆಯ ಭಾಗವಾಗಿ ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಂಧನದ ಬಳಿಕ ಗೀತಾ ಅವರ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ಹಾಗೂ ಮಹಜರು ಪ್ರಕ್ರಿಯೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಯೊಬ್ಬರಿಂದ 20 ಲಕ್ಷ ರೂ. ಲಂಚ ಪಡೆದ ಆರೋಪವೂ ಅವರ ಮೇಲಿದೆ ಎನ್ನಲಾಗಿದೆ.
ಈ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಸ್ಐಟಿ ಮುಂದಾಗಿದೆ.
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆ
ರಾಜ್ಯದಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.
ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಕೀ ಸೋರಿಕೆ ಮಾಡಿ, ಅಭ್ಯರ್ಥಿಗಳಿಂದ 20ರಿಂದ 40 ಲಕ್ಷ ರೂ.ವರೆಗೆ ಹಣ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಅಮಾನತುಗೊಂಡ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಬಿ.ವಿ. ಗೀತಾ, ಐಎಎಸ್ ಅಧಿಕಾರಿ ಹಾಗೂ ಆಯೋಗದ ಮಾಜಿ ಪರೀಕ್ಷಾ ನಿಯಂತ್ರಕ ಗ್ಯಾನೇಂದ್ರ ಕುಮಾರ್ ಗಂಗ್ವಾರ್ ಸೇರಿದಂತೆ ಹಲವರ ಹೆಸರು ತನಿಖೆಯಲ್ಲಿ ಕೇಳಿಬಂದಿದೇ.
ಈಗಾಗಲೇ ಜಾರಿ ನಿರ್ದೇಶನಾಲಯ (ಇ.ಡಿ.) ಕೂಡ ಪ್ರಕರಣದ ಹಣಕಾಸು ಅಕ್ರಮಗಳ ಕುರಿತು ತನಿಖೆ ನಡೆಸುತ್ತಿದೆ. ಇದೀಗ ಎಸ್ಐಟಿ ಗೀತಾ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.
ನೇಮಕಾತಿ ಅಕ್ರಮದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R