ಸಂವಿಧಾನ ದಿನಾಚರಣೆ ಸಿದ್ಧತೆ ಸಭೆಗೆ ಮಹದೇವಪ್ಪ, ತನ್ವೀರ್ ಸೇಠ್ ಗೈರು
ಮೈಸೂರಿನಲ್ಲಿ ನವೆಂಬರ್ 26ರಂದು ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಗೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಶಾಸಕ ತನ್ವೀರ್ ಸೇಠ್ ಗೈರಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಭೆಗೆ ಪ್ರಮುಖ ನಾಯಕರ ಗೈರುಹಾಜರಿ ಕಾಂಗ್ರೆಸ್ ವಲಯದಲ್ಲಿ ಮುನಿಸಿನ ಚರ್ಚೆಗೆ ಕಾರಣವಾಗಿದೆ.
Mahadevappa-Tanveer-Sait-Absent-from-Siddaramaiah-Constitution-Day-Preparatory-Meeting


ಮೈಸೂರು, 19 ನವೆಂಬರ್ (ಹಿ.ಸ.):

ನ.26ರ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವ ಡಾ. ಎಚ್.ಸಿ. ಮಹದೇವಪ್ಪ ಗೈರಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಮಹದೇವಪ್ಪ ಮಾತ್ರವಲ್ಲದೆ, ಶಾಸಕ ತನ್ವೀರ್ ಸೇಠ್ ಹಾಗೂ ಕೆ. ವೆಂಕಟೇಶ್ ಕೂಡ ಗೈರಾಗಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ನವೆಂಬರ್ 26ರಂದು ಮೈಸೂರಿನಲ್ಲಿ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಲು ಬುಧವಾರ ರಾತ್ರಿ ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ, ಎನ್. ಚೆಲುವರಾಯಸ್ವಾಮಿ, ಶಾಸಕ ಯತೀಂದ್ರ ಸಿದ್ದರಾಮಯ್ಯ, ಕೆ.ಎಂ. ಶಿವಲಿಂಗೇಗೌಡ, ಗಣಿಗ ರವಿ, ರಮೇಶ್ ಬಂಡಿಸಿದ್ದೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ, ಶಿವಕುಮಾರ್ ಸೇರಿದಂತೆ ಹಲವು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಆದರೆ, ಜಿಲ್ಲೆಯ ಪ್ರಮುಖ ನಾಯಕರಾದ ಡಾ. ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್ ಮತ್ತು ಕೆ. ವೆಂಕಟೇಶ್ ಸಭೆಗೆ ಹಾಜರಾಗದಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಅದರಲ್ಲೂ ಸಿದ್ದರಾಮಯ್ಯ ಅವರ ಪರಮಾಪ್ತರೆಂದೇ ಗುರುತಿಸಿಕೊಂಡಿರುವ ಮಹದೇವಪ್ಪ ಅವರ ಗೈರುಹಾಜರಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇಬ್ಬರು ನಾಯಕರ ನಡುವಿನ ಅಂತರ ಹೆಚ್ಚಿದೆಯೇ ಎಂಬ ಚರ್ಚೆಯೂ ಮತ್ತೆ ಮುನ್ನೆಲೆಗೆ ಬಂದಿದೆ.

ಸಭೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ರೂಪುರೇಷೆ, ಜನರ ಭಾಗವಹಿಸುವಿಕೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ.

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಂವಿಧಾನ ರಕ್ಷಣೆಯ ಜಾಗೃತಿ ಕಾರ್ಯಕ್ರಮ ಇದಾಗಿರುವುದರಿಂದ ನಮ್ಮೆಲ್ಲ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು” ಎಂದು ಸೂಚನೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande