
ಬಳ್ಳಾರಿ, 19 ನವೆಂಬರ್ (ಹಿ.ಸ.)
ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಘಟಕದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಿಲ್ಲಾಡಳಿತವು, ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿದ್ದ 2023, 2024 ಮತ್ತು 2025ನೇ ಸಾಲಿನ ಜಿಲ್ಲಾ ಮಟ್ಟದ 'ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ ಒಟ್ಟು 30 ಅರ್ಹ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರನ್ನು ಆಯ್ಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರವು ಪ್ರತಿ ವರ್ಷ ಸಾರ್ವಜನಿಕ ಸೇವೆಯಲ್ಲಿ ಉತ್ತಮ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿ ಮತ್ತು ನೌಕರರನ್ನು ಗುರುತಿಸಿ ಪ್ರತಿ ಜಿಲ್ಲೆಗೆ 10ರಂತೆ 'ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ' ನೀಡಿ ಗೌರವಿಸುತ್ತದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 25,000 ನಗದು ಬಹುಮಾನ, ಸ್ಮರಣ ಸಂಚಿಕೆ, ಶಾಲು ಹಾಗೂ ಹಾರದೊಂದಿಗೆ ಸನ್ಮಾನಿಸಲಾಗುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಈ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಡಾ. ನೆಲ್ಕುದ್ರಿ ಸದಾನಂದ ಅವರು, 2023, 2024 ಹಾಗೂ 2025ನೇ ಸಾಲಿನ ಬಾಕಿ ಇರುವ ಒಟ್ಟು 30 ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ನೌಕರರ ಸಂಘದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲೆಯಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸುತ್ತಿರುವ 30 ಅಧಿಕಾರಿ ಮತ್ತು ನೌಕರರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘವು, ಪ್ರಶಸ್ತಿ ಆಯ್ಕೆಗೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಸಹಕರಿಸಿದ ಜಿಲ್ಲಾಡಳಿತದ ಎಲ್ಲಾ ಅಧಿಕಾರಿ ಮತ್ತು ನೌಕರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ. ಅಲ್ಲದೆ, ಪ್ರಶಸ್ತಿಗೆ ಭಾಜನರಾದ ಎಲ್ಲಾ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸಂಘವು ಅಭಿನಂದನೆ ಸಲ್ಲಿಸಿದೆ.
ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಿ 'ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ'ವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಸಂಘ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್