
ಬಾಗಲಕೋಟೆ, 19 ನವೆಂಬರ್ (ಹಿ.ಸ.)
ಕೆರೂರು ಸಮೀಪದ ಹಳಗೇರಿ ಗ್ರಾಮದಲ್ಲಿ ಸರ್ಕಾರಿ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಸರ್ಕಾರಿ ಬಸ್‌ಗಳು ನಿಲುಗಡೆ ಮಾಡದ ಕಾರಣ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಹಳಗೇರಿ ಗ್ರಾಮದಿಂದ ಪ್ರತಿನಿತ್ಯ ಅನೇಕ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕೆರೂರು ಸೇರಿದಂತೆ ಸುತ್ತಮುತ್ತಲಿನ ಪಟ್ಟಣಗಳಿಗೆ ತೆರಳುತ್ತಾರೆ. ಆದರೆ ಗ್ರಾಮದಲ್ಲಿ ಬಸ್ ನಿಲುಗಡೆ ಇಲ್ಲದ ಕಾರಣ ದೂರದ ಮುಖ್ಯ ರಸ್ತೆಗೆ ನಡೆದುಕೊಂಡು ಹೋಗಿ ಬಸ್ ಹತ್ತಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮಸ್ಥ ಹಾಗೂ ಪೋಷಕ ಭೀಮಣ್ಣ ಮೊರಾಬದ್ ಅಸಮಾಧಾನ ವ್ಯಕ್ತಪಡಿಸಿದರು.
ಮಳೆ, ಬಿಸಿಲು ಎನ್ನದೆ ಮಕ್ಕಳು ಮುಖ್ಯ ರಸ್ತೆಗೆ ಬಂದು ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಇದೆ. ಗ್ರಾಮದಲ್ಲಿಯೇ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ಎಲ್ಲ ಗ್ರಾಮಸ್ಥರಿಗೂ ಅನುಕೂಲವಾಗಲಿದೆ ಎಂದು ಪ್ರತಿಭಟನಾಕಾರ ವಿದ್ಯಾರ್ಥಿ ಮೋಹಿತ್ ಆಲಗುಂಡಗಿ ಒತ್ತಾಯಿಸಿದರು.
ಸಾರಿಗೆ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ವಾಹನ ಸವಾರರು ಹಾಗೂ ಪ್ರಯಾಣಿಕರು ತೊಂದರೆ ಅನುಭವಿಸಿದರು.
ಸಾರಿಗೆ ಇಲಾಖೆ ತಕ್ಷಣ ಸ್ಪಂದಿಸಲು ಆಗ್ರಹ
ಹಳಗೇರಿ ಗ್ರಾಮದಲ್ಲಿ ಸರ್ಕಾರಿ ಬಸ್‌ಗಳ ನಿಲುಗಡೆಗೆ ತಕ್ಷಣ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಸೂಕ್ತ ಬಸ್ ಸೌಲಭ್ಯ ಒದಗಿಸಬೇಕು. ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande