
ಆಳಂದ, 19 ನವೆಂಬರ್ (ಹಿ.ಸ.):
ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸ್ನೇಹಿತರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹಳೇ ಆರ್ಟಿಒ ಕಚೇರಿ ಬಳಿ ನಡೆದಿದೆ.
ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಒಂದೇ ಬೈಕ್ನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಶ್ರೀಕಾಂತ (25) ಹಾಗೂ ಗುರುನಾಥ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸ್ನೇಹಿತ ಶಶಿಕಾಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ.
ಮೃತ ಮೂವರೂ ಆಳಂದ ಪಟ್ಟಣದ ನಿವಾಸಿಗಳಾಗಿದ್ದು, ಸ್ನೇಹಿತ ದರ್ಶನ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಸಂಭ್ರಮದಿಂದ ಆರಂಭವಾದ ಸ್ನೇಹಿತರ ಸಂಚಾರ ದುರಂತದಲ್ಲಿ ಅಂತ್ಯಗೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R