
ದಾವಣಗೆರೆ, 19 ನವೆಂಬರ್ (ಹಿ.ಸ.):
ಕೆರೆಯಲ್ಲಿ ಮುಳುಗಿ ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಹದಡಿ ಕೆರೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬಟ್ಟಿಕೆರೆ ಗ್ರಾಮದ ಕುರಿಗಾಯಿಗಳಾದ ದೇವರಾಜ್ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಎಂದಿನಂತೆ ಕುರಿಗಳನ್ನು ಮೇಯಿಸಲು ತೆರಳಿದ್ದ ಸಹೋದರರು, ಹದಡಿ ಕೆರೆಯಲ್ಲಿ ಕುರಿಗಳಿಗೆ ನೀರು ಕುಡಿಸಿದ್ದಾರೆ. ಬಳಿಕ ಮೈ ತೊಳೆಯಲು ಇಬ್ಬರೂ ಕೆರೆಗೆ ಇಳಿದಿದ್ದಾರೆ.
ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳವಾದ ಪ್ರದೇಶಕ್ಕೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಸಹೋದರರನ್ನು ರಕ್ಷಿಸಲು ಸಾಧ್ಯವಾಗದೆ ದುರಂತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಪೈಕಿ ಒಬ್ಬ ಸಹೋದರನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಸಹೋದರನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಒಂದೇ ಕುಟುಂಬದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ಮೂಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R