
ಗದಗ, 19 ನವೆಂಬರ್ (ಹಿ.ಸ.):
ಮೆಣಸಿನ ಪುಡಿಯಲ್ಲಿ ಕೃತಕ ಬಣ್ಣ ಹಾಗೂ ಕಲಬೆರಕೆ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಗದಗ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಮೆಣಸಿನ ಪುಡಿ ತಯಾರಿಕಾ ಘಟಕದ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಆಯೋಗದ ಸದಸ್ಯರನ್ನೊಳಗೊಂಡ ತಂಡ ಗದಗ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿ ತಯಾರಾಗುತ್ತಿದ್ದ ವಿವಿಧ ಬಗೆಯ ಮೆಣಸಿನ ಪುಡಿಗಳನ್ನು ಪರಿಶೀಲಿಸಿತು. ಈ ವೇಳೆ ಪುಡಿಯಲ್ಲಿ ಕೃತಕ ಬಣ್ಣ ಬೆರೆಸಿರುವ ಶಂಕೆ ವ್ಯಕ್ತವಾಗಿದ್ದು, ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಆರೋಪವೂ ಕೇಳಿಬಂದಿದೆ. ಘಟಕದಲ್ಲಿದ್ದ ಕಳಪೆ ಗುಣಮಟ್ಟದ ಮೆಣಸಿನ ಪುಡಿಯನ್ನು ಕಂಡು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಪರಿಶೀಲನೆ ವೇಳೆ ನಾಲ್ಕೈದು ಮಾದರಿಯ ಮೆಣಸಿನ ಪುಡಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಹಲವು ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಕಾರ್ಖಾನೆಯ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಇದಲ್ಲದೆ, ಕಾರ್ಮಿಕರ ಸುರಕ್ಷತಾ ಕ್ರಮಗಳು, ಆರೋಗ್ಯ ಪ್ರಮಾಣಪತ್ರಗಳು, ವೇತನದ ವಿವರಗಳು, ಘಟಕದ ನವೀಕರಣದ ಪ್ರತಿ ಹಾಗೂ ವಾರ್ಷಿಕ ವರದಿಯನ್ನು ಸಲ್ಲಿಸುವಂತೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ, ಸಾರ್ವಜನಿಕರಿಂದ ಬಂದ ದೂರಿನ ಆಧಾರದ ಮೇಲೆ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸಂಗ್ರಹಿಸಿದ ಮೆಣಸಿನ ಪುಡಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪರೀಕ್ಷಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
**ವಿವಿಧ ಸರ್ಕಾರಿ ಕೇಂದ್ರಗಳಿಗೂ ಭೇಟಿ**
ಇದೇ ವೇಳೆ ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲು ಆಹಾರ ಆಯೋಗ ನಿರ್ಧರಿಸಿದೆ. ನ್ಯಾಯಬೆಲೆ ಅಂಗಡಿಗಳು, ಆಹಾರ ಧಾನ್ಯಗಳ ಸಗಟು ಮಳಿಗೆಗಳು, ಅಂಗನವಾಡಿ ಕೇಂದ್ರಗಳು, ಎಂಎಸ್ಪಿಟಿಸಿ, ಮಧ್ಯಾಹ್ನದ ಉಪಾಹಾರ ಯೋಜನೆ, ಆಸ್ಪತ್ರೆಗಳು, ಪೌಷ್ಟಿಕ ಪುನರ್ವಸತಿ ಕೇಂದ್ರಗಳು, ಕೃಷಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ಸೇರಿದಂತೆ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಲಾಗುವುದು.
ಈ ಕೇಂದ್ರಗಳಲ್ಲಿ ಆಹಾರ ಧಾನ್ಯಗಳ ಗುಣಮಟ್ಟ, ಆಹಾರ ವಿತರಣೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಅಧಿಕಾರಿಗಳು, ಸಹಾಯಕ ಆಯುಕ್ತ ಗಂಗಪ್ಪ, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತರಾವ್, ಮಾರುತಿ, ರೋಹಿಣಿ ಪ್ರಿಯಾ, ವಿಜಯಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R