
ಹುಬ್ಬಳ್ಳಿ, 02 ನವೆಂಬರ್ (ಹಿ.ಸ.):
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ದುರ್ಗದ ಬೈಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹಾಲಿನ ದರ ಏರಿಕೆಯನ್ನು ವಿರೋಧಿಸಿ ಹಾಲಿಲ್ಲದ ಚಹಾ ತಯಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೊರಿಸಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟ ಎದುರಿಸುತ್ತಿದ್ದು, ಹಾಲಿನ ದರ ಹೆಚ್ಚಳದಿಂದ ಕುಟುಂಬಗಳ ದೈನಂದಿನ ಖರ್ಚು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸೀಮಾ ಲದವಾ ಅಸಮಾಧಾನ ವ್ಯಕ್ತಪಡಿಸಿದರು.ಕೂಡಲೇ ಹಾಲಿನ ದರ ಏರಿಕೆ ನಿರ್ಧಾರವನ್ನು ಹಿಂಪಡೆದು, ಹಿಂದಿನ ದರವನ್ನು ಜಾರಿಗೊಳಿಸಬೇಕು. ಸರ್ಕಾರ ಜನಸಾಮಾನ್ಯರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರು, ಮಾಜಿ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R