ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ
ಕುಶಿನಗರ,(ಉ.ಪ್ರ.) 02 ನವೆಂಬರ್ (ಹಿ.ಸ.): ತಿಲಕ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಕುಟುಂಬದ ವಾಹನ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಸ
घटना की फोटो


ಕುಶಿನಗರ,(ಉ.ಪ್ರ.) 02 ನವೆಂಬರ್ (ಹಿ.ಸ.):

ತಿಲಕ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಕುಟುಂಬದ ವಾಹನ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಹಾಟಾ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾಟಾ–ಪಿಪರೈಚ್ ರಸ್ತೆಯ ಥರುವಾಡೀಹ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಓಮ್ನಿ ವಾಹನ ಮತ್ತು ಟ್ರೇಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓಮ್ನಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಒಳಗೆ ಸಿಲುಕಿಕೊಂಡಿದ್ದರು.

ಕಪ್ತಾನ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಭಲುಹಿ ಗ್ರಾಮದ ನಿವಾಸಿ, ಗ್ರಾಮ ಪ್ರಧಾನರ ಪ್ರತಿನಿಧಿ ಕನ್ಹಯ್ಯ ಪ್ರಸಾದ್ ಅವರು ಕುಟುಂಬದ ಸದಸ್ಯರು ಹಾಗೂ ಪರಿಚಿತರೊಂದಿಗೆ ದೇವರಾಜ್ ಪಿಪ್ರಾದಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆದ ತಿಲಕ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಡರಾತ್ರಿ ಎಲ್ಲರೂ ಓಮ್ನಿ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಎದುರಿನಿಂದ ಬಂದ ಟ್ರೇಲರ್‌ಗೆ ವಾಹನ ಡಿಕ್ಕಿ ಹೊಡೆದಿದೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಪೊಲೀಸರು ವಾಹನದಲ್ಲಿ ಸಿಲುಕಿದ್ದವರನ್ನು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಘಟನೆಯಲ್ಲಿ ಕನ್ಹಯ್ಯ ಪ್ರಸಾದ್, ಅವರ ತಂದೆ ರಾಮ್‌ಬೆಲಾಸ್, ರಾಮ್ ಮಿಲನ್, ಆಯುಷ್ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಐವರು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗೋರಖ್‌ಪುರ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಅಪಘಾತದ ಸುದ್ದಿ ಭಲುಹಿ ಗ್ರಾಮಕ್ಕೆ ತಲುಪುತ್ತಿದ್ದಂತೆ ಗ್ರಾಮದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಶುಭ ಸಮಾರಂಭದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ಶೋಕದ ಛಾಯೆ ಆವರಿಸಿದೆ.

ಅಪಘಾತದ ಬಳಿಕ ಟ್ರೇಲರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿಯಿಂದ ಸಂತಾಪ

ಕುಶಿನಗರದ ರಸ್ತೆ ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿರುವ ಅವರು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸಾಧ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande