
ಬೆಂಗಳೂರು, 02 ನವೆಂಬರ್ (ಹಿ.ಸ.):
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ₹244 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 3ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.
ಹಿರಿಯೂರು ತಾಲೂಕಿನ ದಿಂಡಾವರ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಜವನಗೊಂಡನಹಳ್ಳಿ ಹೋಬಳಿಯಲ್ಲಿ ನಿರಂತರ ಬರ ಪರಿಸ್ಥಿತಿ, ಕೆರೆಗಳಲ್ಲಿ ನೀರಿನ ಕೊರತೆ ಮತ್ತು ಅಂತರ್ಜಲ ಮಟ್ಟ ಕುಸಿತದ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ. ಈ ಭಾಗದಲ್ಲಿ ಅಂತರ್ಜಲ ಪಡೆಯಲು ಸುಮಾರು 1,000 ಅಡಿ ಆಳದವರೆಗೆ ಕೊಳವೆಬಾವಿ ಕೊರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಹಾಗೂ ಜಲಭದ್ರತೆ ಒದಗಿಸುವ ಉದ್ದೇಶದಿಂದ ಕೆರೆ ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
16 ಕೆರೆಗಳಿಗೆ 0.307 ಟಿಎಂಸಿ ನೀರು
ಯೋಜನೆಯಡಿ ಒಟ್ಟು 0.307 ಟಿಎಂಸಿ ನೀರನ್ನು ಬಳಸಿ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲಾಗುತ್ತದೆ. ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುವ 10 ಕೆರೆಗಳು ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆರು ಕೆರೆಗಳು ಸೇರಿವೆ.
ವೇದಾವತಿ ನದಿಗೆ ಅಡ್ಡಲಾಗಿ ಮುಳುಗಡೆಯಾಗುವ ರೀತಿಯ ನೀರು ತಿರುಗಿಸುವ ತಡೆಗೋಡೆ ನಿರ್ಮಿಸಿ, ಜಾಕ್ವೆಲ್ ಮತ್ತು ಪಂಪ್ಮನೆ ಮೂಲಕ ನೀರನ್ನು ಮೇಲಕ್ಕೆತ್ತಿ ಕೆರೆಗಳಿಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಇದಕ್ಕಾಗಿ 2,000 ಅಶ್ವಶಕ್ತಿ ಸಾಮರ್ಥ್ಯದ ಲಂಬ ಮಾದರಿಯ ಪಂಪುಗಳು, 28.13 ಕಿ.ಮೀ. ಉದ್ದದ ಲೋಹದ ಕೊಳವೆ ಮಾರ್ಗ ಹಾಗೂ 16.82 ಕಿ.ಮೀ. ಉದ್ದದ ಉನ್ನತ ಸಾಂದ್ರತೆಯ ಪಾಲಿಥಿಲೀನ್ ಕೊಳವೆ ಮಾರ್ಗ ನಿರ್ಮಿಸಲಾಗುತ್ತದೆ.
30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ
ಈ ಯೋಜನೆಗೆ 2026ರ ಜುಲೈ 21ರಂದು ₹244 ಕೋಟಿ ಮೊತ್ತದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, 30 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ.
ಬರಪೀಡಿತ ಪ್ರದೇಶಗಳಲ್ಲಿ ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲವನ್ನು ಪುನಶ್ಚೇತನಗೊಳಿಸುವುದು ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಯೋಜನೆಗೆ ಚಾಲನೆ ದೊರೆಯುತ್ತಿರುವುದು ಹಿರಿಯೂರು ಭಾಗದ ಜನರಿಗೆ ಮಹತ್ವದ ಹೆಜ್ಜೆಯಾಗಿದೆ. ಕೆರೆಗಳು ತುಂಬುವುದರಿಂದ ಕುಡಿಯುವ ನೀರಿನ ಭದ್ರತೆ ಹೆಚ್ಚುವುದರ ಜತೆಗೆ ಅಂತರ್ಜಲ ಮಟ್ಟ ಸುಧಾರಣೆ ಮತ್ತು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.
ಸಣ್ಣ ನೀರಾವರಿ ಯೋಜನೆಗಳು ಕೇವಲ ನೀರಾವರಿ ಸೌಲಭ್ಯಕ್ಕೆ ಸೀಮಿತವಾಗದೆ, ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಭದ್ರತೆ, ಅಂತರ್ಜಲ ಮರುಪೂರಣ ಮತ್ತು ರೈತರ ಜೀವನೋಪಾಯಕ್ಕೂ ನೇರವಾಗಿ ಸಂಬಂಧಿಸಿವೆ. ಹೀಗಾಗಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.