
ಹಾಸನ, 02 ನವೆಂಬರ್ (ಹಿ.ಸ.):
ಸನಾತನ ಕಾಲದಿಂದಲೂ ನಡೆದುಬಂದಿರುವ ಚಿತ್ರಕಲೆ ಸೇರಿದಂತೆ ವಿವಿಧ ಜನಪದ ಕಲೆಗಳಿಗೆ ಹೆಚ್ಚಿನ ಮಹತ್ವ ನೀಡಿ, ಅವುಗಳ ಸಂರಕ್ಷಣೆ ಮತ್ತು ಪೋಷಣೆಗೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಹೇಳಿದರು.
ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ನಗರದ ಹೊಸ ಬಸ್ ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ವೀಕ್ಷಿಸಿ ಅವರು ಮಾತನಾಡಿದರು.
ಐದು ಸಾವಿರ ಜನರು ದೇವಿಯ ದರ್ಶನ ಮಾಡಿದರೆ ಅದು ದೇವಿಯ ದರ್ಶನವಾಗುತ್ತದೆ. ಲಕ್ಷಾಂತರ ಜನರು ಆಗಮಿಸಿ ದರ್ಶನ ಮಾಡಿದಾಗ ಅದು ನಾಡಹಬ್ಬದ ಸ್ವರೂಪ ಪಡೆಯುತ್ತದೆ. ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ಜಾತ್ರಾ ಮಹೋತ್ಸವದಲ್ಲೂ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಶಿಸಿ ಹೋಗುತ್ತಿರುವ ಜನಪದ ಕಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಾಳೆಯಿಂದ ಮಹಾನಗರ ಪಾಲಿಕೆ ಆವರಣದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು ಎಂದರು.
ಜಾನುವಾರುಗಳ ಪ್ರದರ್ಶನ ವೀಕ್ಷಿಸಿದ ಸಂದರ್ಭದಲ್ಲಿ ಹಲವು ತಳಿಗಳ ಪರಿಚಯವಾಗಿದ್ದು, ಅವುಗಳ ವೈವಿಧ್ಯತೆಯ ಬಗ್ಗೆ ತಿಳಿದುಕೊಳ್ಳಲು ಅವಕಾಶ ದೊರಕಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಹಾಸನದಲ್ಲಿ ಇದೇ ಮೊದಲ ಬಾರಿಗೆ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿವಿಧ ತಳಿಗಳ ಜಾನುವಾರುಗಳ ಪ್ರದರ್ಶನವೂ ನಡೆಯುತ್ತಿದೆ ಎಂದರು.
ಮಹಿಳೆಯರಲ್ಲಿ ಕಲೆ ಜೀವಂತವಾಗಿದ್ದು, ಕ್ರೀಡೆಗಳು ಮಾನವ ಜೀವನದ ಅವಿಭಾಜ್ಯ ಅಂಗವಾಗಿವೆ. ಪ್ರತಿಯೊಬ್ಬರೂ ಜೀವನದಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ನೇರವಾಗಿ ಆಗಮಿಸಿ ವೀಕ್ಷಿಸಬಹುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಧರಣಿ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಪಿ. ತಾರಾನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.