
ಬಳ್ಳಾರಿ, 20 ನವೆಂಬರ್ (ಹಿ.ಸ.)
ಬಳ್ಳಾರಿ ನಗರದಲ್ಲಿ ನವೆಂಬರ್ 21 ಮತ್ತು 22ರಂದು ವಿವಿಧ ಇಲಾಖೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕಾರಾಗೃಹ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಕ್ರೈಸ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ನವೆಂಬರ್ 21ರಿಂದ 22ರವರೆಗೆ ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಅಡಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.
ನಿರ್ಬಂಧಿತ ಪ್ರದೇಶದ ವ್ಯಾಪ್ತಿಯಲ್ಲಿ ಜೆರಾಕ್ಸ್ ಕೇಂದ್ರಗಳು ಮತ್ತು ಅಂತರ್ಜಾಲ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನಿಷೇಧಿಸಲಾಗಿದೆ. ಅಲ್ಲದೆ, ಅನಧಿಕೃತ ವ್ಯಕ್ತಿಗಳು ಹಾಗೂ ಗುಂಪುಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ.
ಆದರೆ ಪರೀಕ್ಷೆಗಳ ಮೇಲ್ವಿಚಾರಣೆ ಮತ್ತು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್