
ಬೆಂಗಳೂರು, 20 ನವೆಂಬರ್ (ಹಿ.ಸ.):
ರಾಜ್ಯದ 41 ಸಾವಿರ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ರೂ.ಗೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಬದಲಾಗಿ, ನಿಮ್ಮ ಬೇಡಿಕೆಯ ಮೊತ್ತ ದೊಡ್ಡದಿದೆ, ನೀವು ಗಾಳಿಯಲ್ಲಿ ಇರಬೇಡಿ ಎಂದು ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.
ಬೆಳಗಾವಿ ಅಧಿವೇಶನ ಮುಗಿದ ಬಳಿಕ ಬಜೆಟ್ ಮಂಡನೆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಹೇಳುವ ಮೂಲಕ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದು ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರ ಹೊಂದಿರುವ ಸಂವೇದನಾರಹಿತ ಧೋರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.
ಕಳೆದ ಬಾರಿ ಸರ್ಕಾರ ನೀಡಿದ್ದ ಭರವಸೆಗಳನ್ನು ನಂಬಿ ಮೋಸಹೋಗಿರುವ ಕಾರ್ಯಕರ್ತೆಯರು ಇದೀಗ ಮತ್ತೊಮ್ಮೆ ಬೀದಿಗಿಳಿದು ಹೋರಾಟ ತೀವ್ರಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಹಗಲು-ರಾತ್ರಿ ಶ್ರಮಿಸುವ ಆಶಾ ಕಾರ್ಯಕರ್ತೆಯರ ಸಹನೆಯ ಕಟ್ಟೆ ಒಡೆಯುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸಬೂಬು ಹೇಳುವುದನ್ನು ಬಿಟ್ಟು ಕೂಡಲೇ ಲಿಖಿತ ಭರವಸೆ ನೀಡಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.