
ಬೆಂಗಳೂರು, 20 ನವೆಂಬರ್ (ಹಿ.ಸ.):
ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿರುವ ಲೇಖಕ ರವಿ ಹಂಜ್ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದ್ದು, ನಾಡಿನ ಸಾಂಸ್ಕೃತಿಕ ನಾಯಕನ ಗೌರವಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ಅಸ್ಮಿತೆಯಾಗಿದ್ದು, 12ನೇ ಶತಮಾನದಲ್ಲಿಯೇ ರಾಜ್ಯದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸಕ್ಕೆ ಹೊಸ ದಿಕ್ಕು ನೀಡಿದ ಮಹಾನ್ ಚೇತನರಾಗಿದ್ದಾರೆ ಎಂದು ಹೇಳಿದ್ದಾರೆ.
ಅನುಭವ ಮಂಟಪದ ಮೂಲಕ ಸಂಸತ್ತಿನ ಪರಿಕಲ್ಪನೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಅವರು ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದು ಸ್ಮರಿಸಿದ್ದಾರೆ.
ತಮ್ಮ ಸರ್ಕಾರ ಬಸವಣ್ಣನವರ ಕಾಯಕ ತತ್ವಗಳ ಆಧಾರದ ಮೇಲೆ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಶಯಗಳನ್ನು ಗೌರವಿಸುತ್ತಾ ಬಂದಿದೆ. ಆದರೆ, ರವಿ ಹಂಜ್ ಎಂಬ ಲೇಖಕ 'ಬಸವ ಮಂಟಪ' ಎಂಬ ವಿವಾದಿತ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಬರೆದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಲೇಖಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಾಡಿನ ಮಹನೀಯರ ಕುರಿತು ಹಗುರವಾಗಿ ಬರೆಯುವ ಹಾಗೂ ಸಮಾಜದ ಶಾಂತಿ ಕದಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಬಸವಣ್ಣನವರ ತತ್ವಗಳಿಗೆ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸರ್ಕಾರ ನಿರ್ದಾಕ್ಷಿಣ್ಯವಾಗಿ ತಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.