
ಬಾಗಲಕೋಟೆ, 20 ನವೆಂಬರ್ (ಹಿ.ಸ.)
ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಬರಹ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ರವಿ ಹಂಜಿ ಹಾಗೂ ವಿಶ್ವೇಶ್ವರ ಭಟ್ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಬುದ್ಧ ಬಸವ ಅಂಬೇಡ್ಕರ್ ಜಾಗೃತಿ ವೇದಿಕೆ ಆಗ್ರಹಿಸಿದೆ.
ಬಾಗಲಕೋಟೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ, ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ ಮಹಾನ್ ಸಮಾಜ ಸುಧಾರಕರಾಗಿದ್ದಾರೆ. ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿ ಸಮ ಸಮಾಜ ನಿರ್ಮಾಣಕ್ಕೆ ತಮ್ಮ ವಚನಗಳ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.
ಬಸವಣ್ಣನವರ ವಿಚಾರಧಾರೆಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ಇಡೀ ಮಾನವಕುಲಕ್ಕೆ ಮಾರ್ಗದರ್ಶನ ನೀಡುವಂತಹವು. ಇಂತಹ ಮಹಾನ್ ಶರಣರ ಕುರಿತು ಅವಹೇಳನಕಾರಿಯಾಗಿ ಬಿಂಬಿಸುವ ಬರಹಗಳು ಸಮಾಜದ ಜನರ ಭಾವನೆಗಳಿಗೆ ನೋವುಂಟು ಮಾಡುತ್ತವೆ. ಆದ್ದರಿಂದ ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ರವಿ ಹಂಜಿ ಹಾಗೂ ವಿಶ್ವೇಶ್ವರ ಭಟ್ ಅವರ ಬರಹಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಕಾನೂನು ಉಲ್ಲಂಘನೆಯಾಗಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಬಸವಣ್ಣನವರ ಘನತೆ, ಗೌರವ ಹಾಗೂ ಅವರ ಸಾಮಾಜಿಕ ಚಿಂತನೆಗಳಿಗೆ ಧಕ್ಕೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ವೇದಿಕೆಯ ಮುಖಂಡರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬುದ್ಧ ಬಸವ ಅಂಬೇಡ್ಕರ್ ಜಾಗೃತಿ ವೇದಿಕೆಯ ಮುಖಂಡ ಹನುಮಂತ ಮುಂಗಲಿ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದು, ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande