ಧರ್ಮಸ್ಥಳ ಬುರುಡೆ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ ನಲ್ಲಿ ಹಿನ್ನಡೆ
ಎಫ್ಐಆರ್, ಎಸ್ಐಟಿ ತನಿಖೆ ರದ್ದತಿಗೆ ಸಲ್ಲಿಸಿದ್ದ ಅರ್ಜಿ ವಜಾ
Dharmasthala-Burude-Case-Karnataka-High-Court-Dismisses-Girish-Mattanavar-Petition


ಬೆಂಗಳೂರು, 20 ನವೆಂಬರ್ (ಹಿ.ಸ.):

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆ ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿರುವ ನ್ಯಾಯಾಲಯ, ಅರ್ಜಿದಾರರಿಗೆ ಹಿನ್ನಡೆ ನೀಡಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಸುಕುಧಾರಿ ವ್ಯಕ್ತಿ ಚಿನ್ನಯ್ಯ ನೀಡಿದ್ದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು.

ತನಿಖೆಯ ಸಂದರ್ಭದಲ್ಲಿ ಚಿನ್ನಯ್ಯನ ಹೇಳಿಕೆಗಳಲ್ಲಿ ವ್ಯತ್ಯಾಸಗಳು ಕಂಡುಬಂದ ಹಿನ್ನೆಲೆಯಲ್ಲಿ ಸುಳ್ಳು ಸಾಕ್ಷ್ಯ ಸೃಷ್ಟಿ, ನಕಲಿ ದಾಖಲೆ ತಯಾರಿಕೆ ಹಾಗೂ ಪಿತೂರಿ ಆರೋಪಗಳ ಕುರಿತು ಎಸ್ಐಟಿ ತನಿಖೆ ಮುಂದುವರಿಸಿದೆ.

ಈ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಹಾಗೂ ಸುಜಾತಾ ಭಟ್ ಸೇರಿದಂತೆ ಆರು ಮಂದಿಯ ವಿರುದ್ಧ ತನಿಖೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಮಟ್ಟಣ್ಣನವರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಎರಡೂ ಕಡೆಯ ವಾದವೇನು?

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಬಾಲನ್, ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು. ಆದರೆ ಸರ್ಕಾರಿ ನೌಕರರಲ್ಲದ ಚಿನ್ನಯ್ಯ ದೂರು ನೀಡಿದ್ದು, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರ ಎಂದು ವಾದಿಸಿದರು.

ಅಲ್ಲದೆ, ವಿಚಾರಣೆಯ ಹೆಸರಿನಲ್ಲಿ ಅರ್ಜಿದಾರರಿಗೆ ಬೆಳಗ್ಗೆಯಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಎಸ್ಐಟಿ ತನಿಖೆ ರದ್ದುಗೊಳಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಎಸ್ಐಟಿ ಪರ ವಾದ ಮಂಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ತನಿಖೆಯ ಹಂತದಲ್ಲಿ ಅರ್ಜಿದಾರರು ಉಲ್ಲೇಖಿಸಿರುವ ತಾಂತ್ರಿಕ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದರು.

ಅಲ್ಲದೆ, ಈ ಹಿಂದೆ ಪ್ರಕರಣದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದ ಅರ್ಜಿದಾರರು, ಇದೀಗ ತನಿಖೆ ತಮ್ಮ ವಿರುದ್ಧ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಿಚಾರಣೆ ವೇಳೆ ನ್ಯಾಯಮೂರ್ತಿ ಶ್ರೀಶಾನಂದ ಅವರು, ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕು ಎಂದು ನೀವೇ ಒತ್ತಾಯಿಸುತ್ತೀರಿ. ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದುಗೊಳಿಸುವಂತೆ ಕೋರುವುದು ಅಕಾಲಿಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಇದೇ ವೇಳೆ, ನ್ಯಾಯಾಧೀಶರ ಕರ್ತವ್ಯ ತಾವರೆ ಎಲೆಯ ಮೇಲಿನ ನೀರಿನಂತಿರಬೇಕು. ನೈತಿಕ ವಿಚಾರಗಳಿಂದ ಪ್ರಭಾವಿತರಾಗದೆ, ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯ ವ್ಯಕ್ತಪಡಿಸಿದರು.

ಅಂತಿಮವಾಗಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಎಫ್ಐಆರ್ ಮತ್ತು ಎಸ್ಐಟಿ ತನಿಖೆ ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ತಿರಸ್ಕರಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande