
ಬೆಂಗಳೂರು, 20 ನವೆಂಬರ್ (ಹಿ.ಸ.):
ಬರದಿಂದ ಸಂಕಷ್ಟಕ್ಕೀಡಾಗಿರುವ ಅರ್ಹ ರೈತರಿಗೆ ಘೋಷಿಸಿರುವ ತಲಾ ₹5,000 ಪರಿಹಾರದ ಹಣವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು. ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ವಿತರಣೆ ಪೂರ್ಣಗೊಳ್ಳದಿರುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಿಕಾಸಸೌಧದಲ್ಲಿ ಗುರುವಾರ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ಯಾವುದೇ ಜಿಲ್ಲೆಯಲ್ಲಿಯೂ ವರದಿಗಳಿಲ್ಲ. ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಕೃಷಿ ಉತ್ಪಾದನೆ ಕುಂಠಿತಗೊಂಡರೆ ಅದರ ಪರಿಣಾಮ ಇತರ ಕ್ಷೇತ್ರಗಳ ಮೇಲೂ ಬೀರುತ್ತದೆ. ಹೀಗಾಗಿ ಬರದ ಪರಿಣಾಮಗಳನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ರೈತರಿಗೆ ಪರಿಹಾರದ ಹಣ ತಲುಪಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಅವು ಕಾರ್ಯರೂಪಕ್ಕೆ ಬರಬೇಕು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಹಣ ತಲುಪಿಸಲು ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಒದಗಿಸಬೇಕು. ಮೇವಿನ ಬೀಜದ ಕಿಟ್ಗಳ ವಿತರಣೆಯಲ್ಲಿ ಹಿಂದುಳಿದ ಜಿಲ್ಲೆಗಳು ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು. ಮೇವಿನ ಬೀಜದ ಕಿಟ್ಗಳ ವಿತರಣೆಗೆ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.