ರಾಜಕುಮಾರ್ ಲೇಔಟ್ ನಿವಾಸಿಗಳ ಸಮಸ್ಯೆ ಆಲಿಸಿದ ಮಾಜಿ ಶಾಸಕ ರಾಜು ಆಲಗೂರ್
ವಿಜಯಪುರ, 20 ನವೆಂಬರ್ (ಹಿ.ಸ.) ವಿಜಯಪುರ ನಗರದ ರಾಜಕುಮಾರ್ ಲೇಔಟ್ ಬಡಾವಣೆಯ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾಜಿ ಶಾಸಕ ರಾಜು ಆಲಗೂರ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬಡಾವಣೆಯ ನಿವಾಸಿಗಳು ತಮ್ಮ ಪ್ರದೇಶದಲ್ಲಿ
ಬಡಾವಣೆ ಸ್ವಚತೆ


ವಿಜಯಪುರ, 20 ನವೆಂಬರ್ (ಹಿ.ಸ.)

ವಿಜಯಪುರ ನಗರದ ರಾಜಕುಮಾರ್ ಲೇಔಟ್ ಬಡಾವಣೆಯ ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿ, ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾಜಿ ಶಾಸಕ ರಾಜು ಆಲಗೂರ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಬಡಾವಣೆಯ ನಿವಾಸಿಗಳು ತಮ್ಮ ಪ್ರದೇಶದಲ್ಲಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿ, ರಸ್ತೆ, ಉದ್ಯಾನವನ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು.

ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಬಿಡಿಎ ಅಧ್ಯಕ್ಷ ಗಂಗಾಧರ ಅವರು ಮಾತನಾಡಿ, ರಾಜಕುಮಾರ್ ಲೇಔಟ್ ಬಡಾವಣೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಿ, ನಿವಾಸಿಗಳಿಗೆ ಉತ್ತಮ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಶೇಷವಾಗಿ ಬಡಾವಣೆಯ ಉದ್ಯಾನವನದ ಅಭಿವೃದ್ಧಿಗೆ ನಿವಾಸಿಗಳು ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ಉದ್ಯಾನವನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಡಾವಣೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವುದು ಹಾಗೂ ಮಕ್ಕಳಿಗೆ ಆಟವಾಡಲು, ಹಿರಿಯ ನಾಗರಿಕರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಿವಾಸಿಗಳ ಬೇಡಿಕೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಶಂಭುಲಿಂಗ್ ಹೇರಲಗಿ ಉಪಸ್ಥಿತರಿದ್ದು, ನಿವಾಸಿಗಳು ಸಲ್ಲಿಸಿದ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ಪ್ರಾಧಿಕಾರದ ವತಿಯಿಂದ ನಿಯಮಾನುಸಾರ ಅಗತ್ಯ ಸಹಕಾರ ಮತ್ತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ರಾಜು ಆಲಗೂರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರು. ತಮ್ಮ ಅಹವಾಲುಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀಡಿರುವ ಭರವಸೆಗಳು ಕೇವಲ ಮಾತುಗಳಿಗೆ ಸೀಮಿತವಾಗದೆ, ಶೀಘ್ರದಲ್ಲೇ ಕಾರ್ಯರೂಪಕ್ಕೆ ಬಂದು ರಾಜಕುಮಾರ್ ಲೇಔಟ್ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂಬ ಆಶಯವನ್ನು ನಿವಾಸಿಗಳು ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande