ಭಾರತ–ಯುಎಇ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಸಂಶೋಧನಾ ಸಹಕಾರ ವಿಸ್ತರಣೆಗೆ ದ್ವಿಪಕ್ಷೀಯ ಮಾತುಕತೆ
ನವದೆಹಲಿ, 20 ನವೆಂಬರ್ (ಹಿ.ಸ.): ಭಾರತ ಮತ್ತು ಸಂಯುಕ್ತ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಸಂಶೋಧನಾ ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ ಅವರು ಯುಎಇಯ ಮಾನವ ಸಂಪನ್ಮೂಲ ಮತ್ತು ಎಮಿರೇಟೈಸೇಶನ್ ಸಚಿವ ಹಾಗೂ
ಭಾರತ–ಯುಎಇ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಸಂಶೋಧನಾ ಸಹಕಾರ ವಿಸ್ತರಣೆಗೆ ದ್ವಿಪಕ್ಷೀಯ ಮಾತುಕತೆ


ನವದೆಹಲಿ, 20 ನವೆಂಬರ್ (ಹಿ.ಸ.):

ಭಾರತ ಮತ್ತು ಸಂಯುಕ್ತ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ ಸಂಶೋಧನಾ ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ ಅವರು ಯುಎಇಯ ಮಾನವ ಸಂಪನ್ಮೂಲ ಮತ್ತು ಎಮಿರೇಟೈಸೇಶನ್ ಸಚಿವ ಹಾಗೂ ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನಾ ಖಾತೆಯ ಹಂಗಾಮಿ ಸಚಿವ ಡಾ. ಅಬ್ದುಲ್‌ರಹಮಾನ್ ಅಬ್ದುಲ್‌ಮನ್ನಾನ್ ಅಲ್ ಅವರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಭಾರತ–ಯುಎಇ ಶಿಕ್ಷಣ ಒಪ್ಪಂದವನ್ನು ಕಾರ್ಯಗತಗೊಳಿಸುವುದು, ಶೈಕ್ಷಣಿಕ ವಿನಿಮಯಕ್ಕೆ ಉತ್ತೇಜನ ನೀಡುವುದು ಹಾಗೂ ಡಿಜಿಲಾಕರ್ ಮೂಲಕ ಶೈಕ್ಷಣಿಕ ದಾಖಲೆಗಳ ದೃಢೀಕರಣಕ್ಕೆ ಅನುಕೂಲ ಕಲ್ಪಿಸುವ ಕುರಿತು ಚರ್ಚಿಸಲಾಯಿತು. ಜತೆಗೆ ಜಂಟಿ ಪದವಿ, ದ್ವಿಪದವಿ ಮತ್ತು ಸಹಭಾಗಿತ್ವದ ಶಿಕ್ಷಣ ಕಾರ್ಯಕ್ರಮಗಳನ್ನು ವಿಸ್ತರಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಾದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ದೆಹಲಿ ಮತ್ತು ಭಾರತೀಯ ನಿರ್ವಹಣಾ ಸಂಸ್ಥೆ (ಐಐಎಂ) ಅಹಮದಾಬಾದ್‌ಗಳ ಶಾಶ್ವತ ಶಾಖೆಗಳನ್ನು ಯುಎಇಯಲ್ಲಿ ಸ್ಥಾಪಿಸುವ ಪ್ರಸ್ತಾವನೆಯೂ ಚರ್ಚೆಯ ಪ್ರಮುಖ ವಿಷಯವಾಗಿತ್ತು.

ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆ ಕ್ಷೇತ್ರಗಳಲ್ಲಿ ಈಗಾಗಲೇ ನಡೆಯುತ್ತಿರುವ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಅಟಲ್ ಇನ್‌ಕ್ಯುಬೇಷನ್ ಕೇಂದ್ರಗಳು ಮತ್ತು ಅಟಲ್ ಟಿಂಕರಿಂಗ್ ಪ್ರಯೋಗಾಲಯಗಳ ಮೂಲಕ ಸಹಯೋಗ ವಿಸ್ತರಿಸುವುದರ ಜತೆಗೆ, ಕೈಗಾರಿಕೆಗಳ ಅಗತ್ಯಕ್ಕೆ ಅನುಗುಣವಾಗಿ ಯುವಜನರಿಗೆ ಕೌಶಲ ತರಬೇತಿ ನೀಡಲು ಯುಎಇಯಲ್ಲಿ ಜಂಟಿ ಕೌಶಲ ಕೇಂದ್ರ ಸ್ಥಾಪಿಸುವ ಬಗ್ಗೆಯೂ ಪ್ರಸ್ತಾಪಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಶಿಕ್ಷಣ ಕ್ಷೇತ್ರವು ಉಭಯ ದೇಶಗಳ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭವಾಗಿ ಹೊರಹೊಮ್ಮುತ್ತಿದೆ. ಇದರಿಂದ ಶೈಕ್ಷಣಿಕ ಸಹಕಾರಕ್ಕೆ ಹೊಸ ಅವಕಾಶಗಳು ತೆರೆದುಕೊಳ್ಳುವುದರ ಜತೆಗೆ ಎರಡೂ ದೇಶಗಳ ಜನರು ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ಸಂಬಂಧ ಮತ್ತಷ್ಟು ಬಲಗೊಳ್ಳಲಿದೆ ಎಂದು ಪ್ರಹ್ಲಾದ ಜೋಶಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande