ಮಂಡ್ಯದಲ್ಲಿ ಕನ್ನಡ ಹಬ್ಬದ ಸಂಭ್ರಮ: ಕನ್ನಡ ಜಾಗೃತಿ ಸಮಾವೇಶ, ಸಾಧಕರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ
ಮಂಡ್ಯದಲ್ಲಿ ಕನ್ನಡ ಸೇನೆ ವತಿಯಿಂದ ಕನ್ನಡ ಜಾಗೃತಿ ಸಮಾವೇಶ ಹಾಗೂ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಸಾಹಿತಿ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದ್ದು, ನಟ ಕೆ.ಆರ್.ಪೇಟೆ ಶಿವರಾಜು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಮಫಲಕಗಳಲ್ಲಿ ಕನ್ನಡ
Kannada-Awareness-Convention-Celebrated-in-Mandya-Kannada-Ratna-Awards


ಮಂಡ್ಯ, 20 ನವೆಂಬರ್ (ಹಿ.ಸ.):

ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಸೇನೆ ವತಿಯಿಂದ ಕನ್ನಡ ಜಾಗೃತಿ ಸಮಾವೇಶವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಜಾಗೃತಿ ಮೆರವಣಿಗೆ ನಡೆಸುವ ಮೂಲಕ ಕನ್ನಡ ಭಾಷೆ, ನಾಡು-ನುಡಿಯ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕನ್ನಡ ಜಾಗೃತಿ ಸಮಾವೇಶದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಕನ್ನಡದ ಪರ ಘೋಷಣೆಗಳನ್ನು ಮೊಳಗಿಸುವ ಮೂಲಕ ಭಾಷಾಭಿಮಾನ ಸಾರಲಾಯಿತು.

ನಂತರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ನಟ ಕೆ.ಆರ್.ಪೇಟೆ ಶಿವರಾಜು ಸೇರಿದಂತೆ ಹಲವರು ಪ್ರಶಸ್ತಿಗೆ ಭಾಜನರಾದರು.

ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲ ಅಂಗಡಿ, ವಾಣಿಜ್ಯ ಮಳಿಗೆಗಳು ಹಾಗೂ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ಮತ್ತು ಗೌರವ ನೀಡುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.

ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಕನ್ನಡದ ಅಸ್ಮಿತೆ ಹಾಗೂ ಹಕ್ಕುಗಳ ರಕ್ಷಣೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande