ಮಂಗಳೂರು: ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ ಆರೋಪ; ಕುಟುಂಬಸ್ಥರ ವಿರುದ್ಧ ದೂರು ದಾಖಲು
ಮಂಗಳೂರು, 20 ನವೆಂಬರ್ (ಹಿ.ಸ.): ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮುಸ್ಲಿಂ ಸಮುದಾಯದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ. ಕಣಚೂರು ಮೆಡಿಕಲ್ ಕಾಲೇಜಿನ ಆವರಣದ
Mangaluru-Medical-College-Student-Allegedly-Kidnapped-Police-Investigation


ಮಂಗಳೂರು, 20 ನವೆಂಬರ್ (ಹಿ.ಸ.):

ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮುಸ್ಲಿಂ ಸಮುದಾಯದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಮಂಗಳೂರಿನಲ್ಲಿ ಕೇಳಿಬಂದಿದೆ.

ಕಣಚೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲವು ವ್ಯಕ್ತಿಗಳು ಕಾಲೇಜು ಆವರಣಕ್ಕೆ ಆಗಮಿಸಿ ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ದು ಥಾರ್ ವಾಹನದಲ್ಲಿ ಕರೆದೊಯ್ಯುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ವಿದ್ಯಾರ್ಥಿನಿ ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಆರೋಪಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಹಾಗೂ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, ಸಂಬಂಧಪಟ್ಟ ಯುವತಿ ಕಾನೂನುಬದ್ಧವಾಗಿ ವಯಸ್ಕಳಾಗಿರುವುದರಿಂದ ತನ್ನ ಇಚ್ಛೆಯಂತೆ ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗೆ ಇದೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಕರೆದೊಯ್ಯುವುದು ಅಪರಾಧವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ತೆರಳುವ ಮೊದಲೇ ತಡೆಯಲು ಸಾಧ್ಯವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ವಿದ್ಯಾರ್ಥಿನಿಯನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ವೈರಲ್ ಆಗಿರುವ ವಿಡಿಯೋ ಹಾಗೂ ಅಪಹರಣದ ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿದುಬರಬೇಕಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande