
ಬಾಗಲಕೋಟೆ, 20 ನವೆಂಬರ್ (ಹಿ.ಸ.)
ಸತ್ಯದ ಬೆಳಕಿಗೆ ಸುಳ್ಳಿನ ನೆರಳು ಶಾಶ್ವತವಲ್ಲ. ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳಿಗೆ ಅಪಮಾನದ ಕತ್ತಲೆ ಎಂದಿಗೂ ಅಡ್ಡಿಯಾಗದು. ಬಸವಣ್ಣನವರ ಘನತೆಗೆ ಧಕ್ಕೆ ತರುವಂತಹ ಕೃತ್ಯಗಳನ್ನು ಖಂಡಿಸುವುದರ ಜೊತೆಗೆ, ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, 12ನೇ ಶತಮಾನದಲ್ಲಿಯೇ ಜಾತಿ, ಧರ್ಮ, ವರ್ಗಗಳ ತಾರತಮ್ಯವನ್ನು ವಿರೋಧಿಸಿ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದ ಬಸವಣ್ಣನವರು ಜಗತ್ತಿನ ಮಹಾನ್ ಸಮಾಜ ಸುಧಾರಕರಲ್ಲಿ ಒಬ್ಬರಾಗಿದ್ದಾರೆ. ಅವರ ವಚನಗಳು ಹಾಗೂ ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ. ಇಂತಹ ಮಹಾನ್ ಶರಣರ ವ್ಯಕ್ತಿತ್ವ ಮತ್ತು ಗೌರವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಸವಣ್ಣನವರ ತತ್ವಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅವು ಇಡೀ ಮಾನವ ಸಮಾಜಕ್ಕೆ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಸಂದೇಶವನ್ನು ನೀಡುತ್ತವೆ. ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಿದ ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಬರೆಯುವಾಗ ಜವಾಬ್ದಾರಿ ಹಾಗೂ ಸಾಮಾಜಿಕ ಬದ್ಧತೆ ಇರಬೇಕು ಎಂದು ತಿಳಿಸಿದ್ದಾರೆ.
ಬಸವಣ್ಣನವರ ತತ್ವವೇ ನಮ್ಮ ಶಕ್ತಿ
ಬಸವಣ್ಣನವರ ತತ್ವವೇ ನಮ್ಮ ಶಕ್ತಿ. ಅವರ ಗೌರವ ಹಾಗೂ ಲಿಂಗಾಯತ ಸಮುದಾಯದ ಆತ್ಮಗೌರವದ ರಕ್ಷಣೆಯೇ ನಮ್ಮ ಸಂಕಲ್ಪವಾಗಿದೆ. ಬಸವಣ್ಣನವರ ಸಮಾನತೆಯ ಸಂದೇಶ, ಕಾಯಕ ತತ್ವ ಮತ್ತು ಸಾಮಾಜಿಕ ಪರಿವರ್ತನೆಯ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.
ಬಸವಣ್ಣನವರ ವಿಚಾರಧಾರೆಗಳಿಗೆ ಅಪಚಾರವಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಗೌರವದ ವಾತಾವರಣ ನಿರ್ಮಾಣವಾಗಬೇಕು. ಬಸವಣ್ಣನವರ ಮಾನವೀಯ ಮೌಲ್ಯಗಳು ಮತ್ತು ಸಮಾನತೆಯ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande