
ಬೆಂಗಳೂರು, 20 ನವೆಂಬರ್ (ಹಿ.ಸ.):
ಬಡವರಿಗೆ ಶಾಶ್ವತ ಸೂರು ಕಲ್ಪಿಸುವ ಉದ್ದೇಶದಿಂದ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಗೆ ವಿಶೇಷ ಆದ್ಯತೆ ನೀಡಿ, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು.
ವಿಕಾಸಸೌಧದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಆಶಯದಂತೆ ಬಡವರಿಗೆ ನಿವೇಶನ ಒದಗಿಸುವ ಯೋಜನೆಯನ್ನು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿ ಪರಿಗಣಿಸಬೇಕು ಎಂದರು.
ಈ ಯೋಜನೆಗಾಗಿ ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಜಮೀನಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಹಾಗೂ ನಿವೇಶನ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಯಾವುದೇ ವಿಳಂಬವಾಗಬಾರದು ಎಂದು ನಿರ್ದೇಶನ ನೀಡಿದರು.
ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಬಡವರು ಇಂದಿಗೂ ಗುಡಿಸಲುಗಳಲ್ಲಿ ವಾಸಿಸುವ ಪರಿಸ್ಥಿತಿ ಮುಂದುವರಿದಿರುವುದು ಕಳವಳಕಾರಿ. ಅವರಿಗೆ ಶಾಶ್ವತ ವಸತಿ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ರಾಜ್ಯದ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದ್ದು, ಪಿಂಚಣಿಗೆ ಅರ್ಹರಾಗಿರುವವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.