₹16 ಸಾವಿರ ಕೋಟಿ ವೆಚ್ಚದ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, 20 ನವೆಂಬರ್ (ಹಿ.ಸ.): ಗ್ರಾಮಗಳು ಭಾರತ ದೇಶದ ಆತ್ಮವಾಗಿದ್ದು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಹಾಗೂ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿ
ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 20 ನವೆಂಬರ್ (ಹಿ.ಸ.):

ಗ್ರಾಮಗಳು ಭಾರತ ದೇಶದ ಆತ್ಮವಾಗಿದ್ದು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಹಾಗೂ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿದ್ದ ಒಟ್ಟು ₹16,000 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ₹10,000 ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ 15,000 ಕಿಲೋಮೀಟರ್ ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ. ಗ್ರಾಮೀಣ ಪ್ರದೇಶಗಳ ರಸ್ತೆ ಸಂಪರ್ಕವನ್ನು ಸುಧಾರಿಸುವ ಮೂಲಕ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.

ಅದೇ ರೀತಿ, ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ₹6,000 ಕೋಟಿ ವೆಚ್ಚದಲ್ಲಿ ರಾಜ್ಯದ 29,340 ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದರಡಿ ಸಿಮೆಂಟ್ ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಚರಂಡಿ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅತ್ಯಂತ ಮುಖ್ಯವಾಗಿದೆ. ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಕೆ.ಎಸ್. ಬಸವಂತಪ್ಪ, ಶಾಸಕರು ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ರಹೀಂ ಖಾನ್, ಎನ್.ಎಚ್. ಕೋನರಡ್ಡಿ, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತೆ ಫೌಜಿಯಾ ತರನ್ನಮ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande